ನವದೆಹಲಿ: ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹಾಗೂ ಹಿರಿಯ ರಕ್ಷಣಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಬುಧವಾರ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಪತನಗೊಂಡಿದ್ದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಬಿಪಿನ್ ರಾವತ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ.
ಘಟನೆಯ ಕುರಿತು ರಾಜನಾಥ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿವರಣೆ ನೀಡಿದ್ದು, ಅಪಘಾತದ ಬಗ್ಗೆ ಸರ್ಕಾರ ಸಂಸತ್ತಿನಲ್ಲಿ ಹೇಳಿಕೆ ನೀಡುವ ಸಾಧ್ಯತೆಯಿದೆ.
ರಾಜನಾಥ್ ಸಿಂಗ್ ಅವರು ಇಂದು ಮಧ್ಯಾಹ್ನ ಜನರಲ್ ಬಿಪಿನ್ ರಾವತ್ ಅವರ ನಿವಾಸಕ್ಕೆ ಭೇಟಿ, ಅವರ ಪುತ್ರ ಕೃತಿಕಾ ರಾವತ್ ಅವರನ್ನು ಭೇಟಿ ಮಾಡಿ, ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಘಟನಾ ಸ್ಥಳದಲ್ಲಿ ಪ್ರಸ್ತುತ 13 ಮೃತದೇಹಗಳು ಪತ್ತೆಯಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದ ಒಬ್ಬರ ಬಗ್ಗೆ ಇನ್ನೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ತಮಿಳುನಾಡು ಅರಣ್ಯ ಸಚಿವ ಕೆ ರಾಮಚಂದ್ರನ್ ಅವರು ತಿಳಿಸಿದ್ದಾರೆ.