ನವದೆಹಲಿ: ಹೊಸ ಕೋವಿಡ್ ರೂಪಾಂತರಿ 'ಓಮಿಕ್ರಾನ್' ತಳಿ ಜಗತ್ತಿನಾದ್ಯಂತ ತಲ್ಲಣ ಸೃಷ್ಟಿಸಿದ್ದು ಈ ಹಿನ್ನೆಲೆಯಲ್ಲಿ ಡಿಸೆಂಬರ್ 15 ರಿಂದ ನಿಗದಿತ ಅಂತಾರಾಷ್ಟ್ರೀಯ ವಿಮಾನಗಳ ಪುನರಾರಂಭವನ್ನು ಮುಂದೂಡಲು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ನಿರ್ಧರಿಸಿದೆ.
ಹೊಸ ರೂಪಾಂತರಿಯ ಹೊರಹೊಮ್ಮುವಿಕೆಯೊಂದಿಗೆ ವಿಕಸನಗೊಳ್ಳುತ್ತಿರುವ ಜಾಗತಿಕ ಸನ್ನಿವೇಶದ ದೃಷ್ಟಿಯಿಂದ, ಎಲ್ಲಾ ಮಧ್ಯಸ್ಥಗಾರರೊಂದಿಗೆ ಸಮಾಲೋಚಿಸಿ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಮತ್ತು ನಿಗದಿತ ವಾಣಿಜ್ಯ ಅಂತಾರಾಷ್ಟ್ರೀಯ ಪ್ರಯಾಣಿಕರ ಸೇವೆಗಳ ಪುನರಾರಂಭದ ದಿನಾಂಕವನ್ನು ಮುಂದೂಡಲಾಗಿದೆ ಎಂದು ಡಿಜಿಸಿಎ ಹೇಳಿಕೆಯಲ್ಲಿ ಉಲ್ಲೇಖಿಸಿದೆ.
ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯವಾಗಿ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ತಿಂಗಳು, ಅಂತಾರಾಷ್ಟ್ರೀಯ ವಿಮಾನ ಕಾರ್ಯಾಚರಣೆಗಳನ್ನು ಸಾಮಾನ್ಯಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿತು.
ಕೊರೋನಾವೈರಸ್ ಸಾಂಕ್ರಾಮಿಕ ರೋಗದ ನಂತರ ಮಾರ್ಚ್ 2020ರಿಂದ ಭಾರತಕ್ಕೆ ಮತ್ತು ಭಾರತದಿಂದ ನಿಗದಿತ ಅಂತಾರಾಷ್ಟ್ರೀಯ ವಿಮಾನಗಳನ್ನು ಸ್ಥಗಿತಗೊಳಿಸಿತ್ತು.
ಬೋಟ್ಸ್ವಾನಾ, ಯುಕೆ, ಆಸ್ಟ್ರೇಲಿಯಾ, ಆಸ್ಟ್ರಿಯಾ, ಬೆಲ್ಜಿಯಂ, ಬ್ರೆಜಿಲ್, ಕೆನಡಾ, ಜೆಕ್ ರಿಪಬ್ಲಿಕ್, ಡೆನ್ಮಾರ್ಕ್, ಜರ್ಮನಿ, ಹಾಂಗ್ ಕಾಂಗ್, ಇಸ್ರೇಲ್, ಇಟಲಿ, ಜಪಾನ್, ನೆದರ್ಲ್ಯಾಂಡ್ಸ್, ಪೋರ್ಚುಗಲ್, ದಕ್ಷಿಣ ಆಫ್ರಿಕಾ, ಸ್ಪೇನ್, ಸ್ವೀಡನ್, ಸ್ವಿಟ್ಜರ್ಲೆಂಡ್, ನೈಜೀರಿಯಾ ಮತ್ತು ಸೌದಿ ಅರೇಬಿಯಾದಲ್ಲಿ ಇಲ್ಲಿಯವರೆಗೆ ಓಮಿಕ್ರಾನ್ ಪ್ರಕರಣಗಳು ವರದಿಯಾಗಿವೆ.