ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಮತ್ತಷ್ಟು ತಗ್ಗಿದೆ. ಮಂಗಳವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 5 ಸಾವಿರದ 784 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 252 ಮಂದಿ ಮೃತಪಟ್ಟಿದ್ದಾರೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 88 ಸಾವಿರದ 993ಕ್ಕೆ ಇಳಿಕೆಯಾಗಿದ್ದು 7 ಸಾವಿರದ 995 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದುವರೆಗೆ ದೇಶದಲ್ಲಿ 3 ಕೋಟಿಯ 41 ಲಕ್ಷದ 38 ಸಾವಿರದ 763 ಮಂದಿ ಗುಣಮುಖ ಹೊಂದಿದ್ದಾರೆ ಎಂದು ಕೇಂದ್ರ ಸರ್ಕಾರದ ಅಂಕಿಅಂಶ ತಿಳಿಸಿದೆ.
ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 4 ಲಕ್ಷದ 75 ಸಾವಿರದ 888ಕ್ಕೇರಿದೆ. ದೇಶದಲ್ಲಿ ಸೋಂಕಿನಿಂದ ಗುಣಮುಖ ಹೊಂದುತ್ತಿರುವ ಪ್ರಮಾಣ ಶೇಕಡಾ 98.37ರಷ್ಟಿದ್ದು ಮಾರ್ಚ್ 2020ರ ನಂತರ ಅಧಿಕವಾಗಿದೆ. ಭಾರತದಲ್ಲಿ ಇದುವರೆಗೆ 65.76 ಕೋಟಿ ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 133.88 ಕೋಟಿ ಡೋಸ್ ಲಸಿಕೆಗಳನ್ನು ಜನರಿಗೆ ನೀಡಲಾಗಿದೆ ಎಂದು ತಿಳಿಸಿದೆ.