ನವದೆಹಲಿ: ಕೋವಿಡ್-19 ರೂಪಾಂತರಿ ಓಮಿಕ್ರಾನ್ ಪ್ರಕರಣ ಮತ್ತು ಹಣದುಬ್ಬರ ಏರಿಳಿತ ನಡುವೆ 2021-22ನೇ ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ಎನ್ ಎಸ್ ಸಿ ಮತ್ತು ಪಿಪಿಎಫ್ ಸೇರಿದಂತೆ ಸಣ್ಣ ಉಳಿತಾಯ ಯೋಜನೆಗಳಲ್ಲಿನ ಬಡ್ಡಿದರದಲ್ಲಿ ಸರ್ಕಾರ ಯಾವುದೇ ಬದಲಾವಣೆ ಮಾಡಿಲ್ಲ.
ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಹಿಮಾಚಲ ಪ್ರದೇಶ ಮತ್ತು ಗೋವಾ ರಾಜ್ಯಗಳ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಈ ರಾಜ್ಯಗಳಲ್ಲಿ ಮುಂದಿನ ತಿಂಗಳು ಚುನಾವಣೆ ನಡೆಯಲಿರುವ ಸಾಧ್ಯತೆಯಿದೆ.
ಸಾರ್ವಜನಿಕ ಭವಿಷ್ಯ ನಿಧಿ ಮತ್ತು ರಾಷ್ಟ್ರೀಯ ಉಳಿತಾಯ ಪ್ರಮಾಣ ಪತ್ರ (ಎನ್ ಎಸ್ ಸಿ) ಮೇಲಿನ ಬಡ್ಡಿದರ ನಾಲ್ಕನೇ ತ್ರೈಮಾಸಿಕ ಅವಧಿಯಲ್ಲಿಯೂ ಕ್ರಮವಾಗಿ ಶೇ. 7.1 ಮತ್ತು 6.8 ರಲ್ಲಿ ಮುಂದುವರೆಯಲಿದೆ.
ಜನವರಿ 1, 2022 ರಿಂದ ಆರಂಭವಾಗಿದ್ದ 2021-22ನೇ ಆರ್ಥಿಕ ವರ್ಷದ ಮೂರನೇ ತ್ರೈಮಾಸಿಕದಲ್ಲಿ ಸಣ್ಣ ಉಳಿತಾಯ ಯೋಜನೆಗಳಿಗೆ ಇದ್ದ ಬಡ್ಡಿ ದರ ನಾಲ್ಕನೇ ತ್ರೈಮಾಸಿಕ ಅವಧಿಯಲ್ಲಿಯೂ ಮುಂದುವರೆಯಲಿದೆ ಎಂದು ಹಣಕಾಸು ಸಚಿವಾಲಯ ಅಧಿಸೂಚನೆಯಲ್ಲಿ ತಿಳಿಸಿದೆ.
ಮುಂಬರುವ ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರ, ಸಣ್ಣ ಉಳಿತಾಯ ಯೋಜನೆಗಳಲ್ಲಿನ ಬಡ್ಡಿದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.