ಕೊಯಮತ್ತೂರು: ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹಾಗೂ ಹಿರಿಯ ರಕ್ಷಣಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಬುಧವಾರ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಪತನಗೊಂಡಿದ್ದು, ಘಟನಾ ಸ್ಥಳದಲ್ಲಿ 8 ಮೃತದೇಹಗಳು ಪತ್ತೆಯಾಗಿವೆ.
ಸೇನಾ ಹೆಲಿಕಾಪ್ಟರ್ ನಲ್ಲಿ ಜನರಲ್ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ರಾವತ್, ಬ್ರಿಗೇಡಿಯರ್ ಎಲ್ಎಸ್ ಲಿಡರ್, ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್, ನಾಯಕ್ ಗುರ್ಸೇವಕ್ ಸಿಂಗ್, ನಾಯಕ್ ಜಿತೇಂದ್ರ ಕುಮಾರ್, ಲ್ಯಾನ್ಸ್ ನಾಯಕ್ ವಿವೇಕ್ ಕುಮಾರ್, ಲ್ಯಾನ್ಸ್ ನಾಯಕ್ ಬಿ ಸಾಯಿ ತೇಜಾ ಮತ್ತು ಹವಾಲ್ದಾರ್ ಸತ್ಪಾಲ್ ಸೇರಿದಂತೆ 14 ಮಂದಿ ಪ್ರಯಾಣಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಸೂಚನೆಯ ಮೇರೆಗೆ ತಾವು ಘಟನಾ ಸ್ಥಳಕ್ಕೆ ತೆರಳುತ್ತಿದ್ದು, ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುವುದಾಗಿ ತಮಿಳುನಾಡು ಅರಣ್ಯ ಸಚಿವ ಕೆ ರಾಮಚಂದ್ರನ್ ಅವರು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.
ಹೆಲಿಕಾಪ್ಟರ್‌ನಲ್ಲಿ 14 ಮಂದಿ ಇದ್ದರು ಎಂಬ ಮಾಹಿತಿ ಇದೆ. ಆದರೆ ರಕ್ಷಣಾ ಮೂಲಗಳು ಇತರ ವಿವರಗಳನ್ನು ಖಚಿತಪಡಿಸಿಲ್ಲ ಎಂದು ಅವರು ಹೇಳಿದ್ದಾರೆ.
ಸ್ಥಳದಲ್ಲಿ ಎಂಟು ಮೃತದೇಹಗಳು ಪತ್ತೆಯಾಗಿದ್ದು, ನಾಲ್ವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದ ಇಬ್ಬರ ಬಗ್ಗೆ ಇನ್ನೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ತಮಿಳುನಾಡು ಅರಣ್ಯ ಸಚಿವರು ತಿಳಿಸಿದ್ದಾರೆ.
ದಟ್ಟವಾದ ಮಂಜು ಆವರಿಸಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ಸಚಿವರು ಹೇಳಿದ್ದಾರೆ.
ಹೆಲಿಕಾಪ್ಟರ್ ಕೂನೂರಿನಿಂದ ಕೊಯಮತ್ತೂರು ಸೇನಾ ಕಾರ್ಯಕ್ರಮಕ್ಕೆ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಮತ್ತು ಇತರ 12 ಜನರನ್ನು (ಸೇನಾಧಿಕಾರಿಗಳೂ ಒಳಗೊಂಡಂತೆ) ಹೊತ್ತು ತೆರಳುತ್ತಿತ್ತು.
ತನಿಖೆಗೆ ಆದೇಶ: ತಮಿಳು ನಾಡಿನ ಕೂನೂರು ಬಳಿ ಎಂಐ-17ವಿ5 ಹೆಲಿಕಾಪ್ಟರ್( Mi-17V5 helicopter) ಪತನಕ್ಕೀಡಾಗಿರುವ ಘಟನೆಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಭಾರತೀಯ ವಾಯುಪಡೆ ರಕ್ಷಣಾ ಪಡೆ ಮುಖ್ಯಸ್ಥ ಬಿಪಿನ್ ರಾವತ್, ಅವರ ಕುಟುಂಬ ಮತ್ತು ಇತರ ಉನ್ನತ ಮಟ್ಟದ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ದುರಂತಕ್ಕೀಡಾಗಿದ್ದು, ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದೆ.