ಮುಂಬೈ: ಬೆಂಗಳೂರಿನಲ್ಲಿ ಶಿವಾಜಿ ಮಹಾರಾಜರ ಪ್ರತಿಮೆ ವಿರೂಪಗೊಳಿಸಿರುವವರ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕನ್ನಡಿಗರ ದೌರ್ಜನ್ಯ ಮತ್ತು ವಿಕೃತಿ ಮನಸ್ಥಿತಿ ತಡೆಯಲು ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶಿಸುವಂತೆ ಅವರು ಆಗ್ರಹಿಸಿದ್ದಾರೆ.
ಶಿವಾಜಿ ಮಹಾರಾಜರು ಮಹಾರಾಷ್ಟ್ರಕ್ಕೆ ಮಾತ್ರವಲ್ಲದೇ ಇಡೀ ದೇಶಕ್ಕೆ ದೈವರು, ಮರಾಠ ಸಾಮ್ರಾಜ್ಯದ ಸ್ಥಾಪಕರಿಗೆ ಯಾರೇ ಅಪಮಾನ, ನಿಂದಿಸಿದರೆ ಅದನ್ನು ತಡೆಯಲು ಸಾಧ್ಯವಿಲ್ಲ ಎಂದಿದ್ದಾರೆ.
ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಉದ್ಧವ್ ಠಾಕ್ರೆ, ಶಿವಾಜಿ ಪ್ರತಿಮೆ ವಿರೂಪ ವಿಚಾರದಲ್ಲಿ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶಿಸಬೇಕು, ಇದನ್ನು ಲಘುವಾಗಿ ಪರಿಗಣಿಸಬಾರದು, ಕರ್ನಾಟಕದಲ್ಲಿ ಮರಾಠ ಮಾತನಾಡುವ ಜನರು ಅನೇಕ ವರ್ಷಗಳಿಂದ ದೌರ್ಜನ್ಯಕ್ಕೆ ತುತ್ತಾಗಿದ್ದಾರೆ. ಇದೀಗ ಶಿವಾಜಿ ಪ್ರತಿಮೆ ವಿರೂಪಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಮರಾಠಿಗರ ಹೆಮ್ಮೆಯ ಶಿವಾಜಿಗೆ ಅಪಮಾನಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ. ಕೇಂದ್ರ ಸರ್ಕಾರ ಇಬ್ಬಗೆ ನೀತಿಯನ್ನು ಬಿಡಬೇಕು, ಕಠಿಣ ಕ್ರಮ ಕೈಗೊಳ್ಳಬೇಕೆಂದು ಉದ್ದವ್ ಠಾಕ್ರೆ ಒತ್ತಾಯಿಸಿದ್ದಾರೆ.