ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 2,58,089 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು. ಇದೇ ಅವಧಿಯಲ್ಲಿ 385 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,73,80,253ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,86,451ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 16,56,341ಕ್ಕೆ ತಲುಪಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 1,51,740 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,52,37,461ಕ್ಕೆ ತಲುಪಿದೆ.
ಭಾರತದಲ್ಲಿ ಒಂದೇ 13,13,444 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 70,37,62,282 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 1,57,20,41,825 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.
ದೇಶದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 8,209ಕ್ಕೆ ಏರಿಕೆ
ಭಾರತದಲ್ಲಿ ಕೋವಿಡ್-19 ಸೋಂಕು ಉಲ್ಬಣವಾಗುತ್ತಿರುವ ಹೊತ್ತಿನಲ್ಲೇ ಓಮಿಕ್ರಾನ್ ಸೋಂಕಿತರ ಸಂಖ್ಯೆ ಕೂಡ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಈ ವರೆಗೂ ದೇಶಾದ್ಯಂತ 8,209 ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ.
ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ದೇಶಾದ್ಯಂತ ಇರುವ ಒಟ್ಟಾರೆ ಓಮಿಕ್ರಾನ್ ಸೋಂಕಿತರ ಸಂಖ್ಯೆ 8,209ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.
ಮಹಾರಾಷ್ಟ್ರ, ದೆಹಲಿ, ಕೇರಳ, ಕರ್ನಾಟಕ ಸೇರಿದಂತೆ ದೇಶದ ಒಟ್ಟು 28 ರಾಜ್ಯಗಳಲ್ಲಿ ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ. ಈ ಪೈಕಿ ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ ಎಂದು ತಿಳಿದುಬಂದಿದೆ.