ನವದೆಹಲಿ: ಓಮಿಕ್ರಾನ್ ಸೋಂಕು ಭೀತಿ ನಡುವೆಯೇ ಕರ್ನಾಟಕ ಸೇರಿದಂತೆ ದೇಶಾದ್ಯಂತ ಕೋವಿಡ್ ಸೋಂಕಿತರ ಸಂಖ್ಯೆ ಹೊಸ ವರ್ಷದ ನಂತರ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 90 ಸಾವಿರದ 928 ಹೊಸ ಕೇಸುಗಳು ವರದಿಯಾಗಿದ್ದು 325 ಮಂದಿ ಮೃತಪಟ್ಟಿದ್ದಾರೆ. ಮೊನ್ನೆ ದೇಶದಲ್ಲಿ 58,097 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದವು.
ದೇಶದಲ್ಲಿ ಒಟ್ಟು ಸಕ್ರಿಯ ಕೋವಿಡ್ ಸೋಂಕಿತರ ಸಂಖ್ಯೆ 2,85,401ಕ್ಕೆ ಏರಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 19 ಸಾವಿರದ 206 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಕೋವಿಡ್ ನಿಂದ ಚೇತರಿಸಿಕೊಂಡವರ ಸಂಖ್ಯೆ 3,43,41,009ಕ್ಕೆ ತಲುಪಿದೆ. ದೇಶದಲ್ಲಿ ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 4 ಲಕ್ಷದ 82 ಸಾವಿರದ 876ಕ್ಕೆ ಏರಿಕೆಯಾಗಿದೆ. ಗುಣಮುಖ ಹೊಂದುತ್ತಿರುವವರ ಪ್ರಮಾಣ ಶೇಕಡಾ 97.81ರಷ್ಟಾಗಿದೆ.
ಭಾರತದಲ್ಲಿ ಒಂದೇ 14,13,030 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೆ 68.53 ಕೋಟಿ ಜನರನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದೆ.
ಭಾರತದಲ್ಲಿ ಕಳೆದ ವರ್ಷ 2021ರ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ಇದೀಗ 15ರಿಂದ 18 ವರ್ಷದ ಮಕ್ಕಳಿಗೆ ಸಹ ಕೊರೋನಾ ಲಸಿಕೆ ನೀಡಲಾಗುತ್ತಿದೆ. ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 148.67 ಕೋಟಿ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.