ನವದೆಹಲಿ: ಶೀಘ್ರದಲ್ಲೇ ವಿಧಾನಸಭಾ ಚುನಾವಣೆಗಳು ನಡೆಯಲಿರುವ ಐದು ರಾಜ್ಯಗಳಲ್ಲಿ ನೀಡಲಿರುವ ಕೋವಿಡ್ ಪ್ರಮಾಣ ಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರ ಇರುವುದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ವಿಧಾನಸಭೆಗಳಿಗೆ ಶನಿವಾರ ಚುನಾವಣಾ ವೇಳಾಪಟ್ಟಿ ಪ್ರಕಟಿಸುವುದರೊಂದಿಗೆ ಜಾರಿಗೆ ಬಂದಿರುವ ಚುನಾವಣಾ ನೀತಿ ಸಂಹಿತೆಯಡಿ ಕ್ರಮ ಕೈಗೊಳ್ಳಲಿದ್ದೇವೆ ಎಂದು ತಿಳಿಸಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಕೋವಿನ್ ಆ್ಯಪ್‌ನಲ್ಲಿ ಈ ಸಂಬಂಧ ಬದಲಾವಣೆಗಳನ್ನು ಮಾಡಲಿದೆ ಎಂದು ಅವರು ವಿವರಿಸಿದ್ದಾರೆ. 2021ರ ಮಾರ್ಚ್‌ನಲ್ಲಿ ನಡೆದ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ವೇಳೆ ರಾಜಕೀಯ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಭಾರತ ಚುನಾವಣಾ ಆಯೋಗದ ಸೂಚನೆಯಂತೆ ಆರೋಗ್ಯ ಸಚಿವಾಲಯ ಇದೇ ರೀತಿಯ ಕ್ರಮ ಕೈಗೊಂಡಿತ್ತು.