ಮಣಿಪುರ: ಮಣಿಪುರ ವಿಧಾನಸಭಾ ಚುನಾವಣೆಗೆ ಟಿಕೆಟ್ ಹಂಚಿಕೆ ವಿಷಯವಾಗಿ ಬಿಜೆಪಿಯಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದ್ದು, ಆಕ್ರೋಶದೊಂಡ ಬಿಜೆಪಿ ಕಾರ್ಯಕರ್ತರು ಪಕ್ಷದ ಕಚೇರಿಯನ್ನು ಲೂಟಿ ಮಾಡಿದ್ದಾರೆ.
ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿ ಕಾಂಗ್ರೆಸ್ ನಿಂದ ವಲಸೆ ಬಂದವರಿಗೆ ಟಿಕೆಟ್ ವಿಚಾರವಾಗಿ ಆದ್ಯತೆ ನೀಡಲಾಗಿದೆ ಎಂಬುದು ಬಿಜೆಪಿ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.
ಅಸಮಾಧಾನಗೊಂಡ ಬಿಜೆಪಿ ಕಾರ್ಯಕರ್ತರು ಮಣಿಪುರದ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯ ವಿರುದ್ಧ ಘೋಷಣೆ ಕೂಗಿ, ಸಿಎಂ ಎನ್ ಬಿರೇನ್ ಸಿಂಗ್ ಹಾಗೂ ರಾಜ್ಯ ವಿಭಾಗದ ಅಧ್ಯಕ್ಷರಾದ ಶಾರದಾ ದೇವಿ ವಿರುದ್ಧ ಘೋಷಣೆ ಕೂಗಿ ಪ್ರತಿಕೃತಿಗಳನ್ನು, ಧ್ವಜವನ್ನು ದಹಿಸಿದ್ದಾರೆ
ಕಾರ್ಯಕರ್ತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಬಿಜೆಪಿ ಕಚೇರಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಇತ್ತೀಚೆಗೆ ಕಾಂಗ್ರೆಸ್ ನಿಂದ ಬಿಜೆಪಿಗೆ ಬಂದವರಿಗೆ ಟಿಕೆಟ್ ನೀಡುವುದಕ್ಕಾಗಿ ಹಲವು ಮೂಲ ಬಿಜೆಪಿಗರಿಗೆ, ಆಕಾಂಕ್ಷಿಗಳಿಗೆ ಟಿಕೆಟ್ ತಪ್ಪಿಸಲಾಗಿದೆ. ಇದರಿಂದ ಅಸಮಾಧಾನಗೊಂಡ ಕೆಲವು ಬಿಜೆಪಿ ನಾಯಕರು ತಮ್ಮ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.