ನವದೆಹಲಿ: ವೈದ್ಯಕೀಯ ಆಮ್ಲಜನಕದ ಲಭ್ಯತೆ ಸಾಕಷ್ಟು ಇರುವಂತೆ ನೋಡಿಕೊಳ್ಳಿ ಎಂದು ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. ಕೋವಿಡ್-19 ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಸಂದರ್ಭದಲ್ಲಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಪತ್ರ ಬರೆದಿದ್ದಾರೆ.
ಸದ್ಯದ ಪರಿಸ್ಥಿತಿಯಲ್ಲಿ ಆಮ್ಲಜನಕದ ಜತೆಗೆ ಎಲ್ಲ ರೀತಿಯ ವೈದ್ಯಕೀಯ ಸೌಲಭ್ಯಗಳ ಲಭ್ಯತೆ ಬಗ್ಗೆ ಖಾತರಿಪಡಿಸಿಕೊಳ್ಳಬೇಕು ಎಂದೂ ಕೇಂದ್ರ ಹೇಳಿದೆ.
ಖಾಸಗಿ ಆಸ್ಪತ್ರೆಗಳ ಆರೋಗ್ಯ ಸೌಲಭ್ಯಗಳ ಮೌಲ್ಯಮಾಪನ ಮಾಡಬಹುದು ಮತ್ತು ಅವುಗಳ ವೈದ್ಯಕೀಯ ಆಮ್ಲಜನಕ ಮೂಲಸೌಕರ್ಯ ಸಾಮರ್ಥ್ಯಗಳನ್ನು ಅನ್ವೇಷಿಸಬೇಕು ಎಂದೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ದೇಶದಲ್ಲಿ ಓಮೈಕ್ರಾನ್‌ನಿಂದಾಗಿ ಕಳೆದ ಕೆಲವು ದಿನಗಳಿಂದ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಬುಧವಾರ ಬೆಳಿಗ್ಗೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ 1,94,720 ಮಂದಿ ಸೋಂಕಿತರಾಗಿದ್ದಾರೆ.