ತಿರುವನಂತಪುರ: ಕೇರಳದ ತ್ರಿಶೂರ್‌ನಲ್ಲಿ ಮದ್ಯಪಾನ ಮಾಡಿ ಕಾರು ಚಲಾಯಿಸಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದ ಪೊಲೀಸ್ ಅಧಿಕಾರಿಯನ್ನು ಮಂಗಳವಾರ ಬಂಧಿಸಲಾಗಿದೆ.
ಸೋಮವಾರ ತಡರಾತ್ರಿ ಸಹಾಯಕ ಸಬ್ ಇನ್ಸ್‌ಪೆಕ್ಟರ್ (ಎಎಸ್‌ಐ) ಪ್ರಶಾಂತ್ ಅವರು ಪಾರ್ಟಿಯೊಂದರಲ್ಲಿ ಪಾಲ್ಗೊಂಡಿದ್ದರು.
ಘಟನೆಯಲ್ಲಿ ಬೈಕ್‌ನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಭೀಕರತೆಯನ್ನು ಕಂಡ ಸ್ಥಳೀಯರು ಕಂಗಾಲಾಗಿದ್ದರು.
ಕಾರು ಅತಿವೇಗವಾಗಿ ಹೋಗುತ್ತಿತ್ತು. ಅಪಘಾತ ನಡೆದ ಸ್ಥಳದಲ್ಲಿ ಕಾರು ನಿಲ್ಲಿಸಿರಲಿಲ್ಲ. ಸುಮಾರು ಒಂದು ಕಿಲೋಮೀಟರ್‌ಗೂ ಹೆಚ್ಚು ದೂರು ಚಲಿಸಿದ ಬಳಿಕ ಚಾಲಕನ ನಿಯಂತ್ರಣ ಕಳೆದುಕೊಂಡು ಕಾರು ನಿಂತಿತ್ತು. ಕೂಡಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದರು.
ಪ್ರಶಾಂತ್, ಮಲಪ್ಪುರಂನ ಪೊಲೀಸ್ ಕ್ಯಾಂಪ್‌ನಲ್ಲಿ ಎಎಸ್‌ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಘಟನೆ ಬಳಿಕ ಪ್ರಶಾಂತ್ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ.
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. ಜತೆಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದರು. ಆದರೆ, ಸಭೆ ನಡೆದ ಕೆಲವೇ ಗಂಟೆಗಳಲ್ಲಿ ತ್ರಿಶೂರ್‌ನಲ್ಲಿ ಘಟನೆ ನಡೆದಿದೆ.