ಇಡುಕ್ಕಿ: ಇಡುಕ್ಕಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಸ್‌ಎಫ್‌ಐ ಕಾರ್ಯಕರ್ತನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಇಂಜಿನಿಯರಿಂಗ್ ವಿದ್ಯಾರ್ಥಿ, ಕಣ್ಣೂರು ನಿವಾಸಿಯಾದ ಧೀರಜ್ ಕೊಲೆಯಾದವರು. ದಾಳಿಯ ಹಿಂದೆ ಕೆಎಸ್‌ಯು ಮತ್ತು ಯೂತ್ ಕಾಂಗ್ರೆಸ್ ಕಾರ್ಯಕರ್ತರು ಇದ್ದಾರೆ ಎಂದು ಎಸ್‌ಎಫ್‌ಐ ಆರೋಪಿಸಿದೆ. ಮತ್ತೊಬ್ಬ ವಿದ್ಯಾರ್ಥಿಗೂ ಚಾಕುವಿನಿಂದ ಇರಿಯಲಾಗಿದೆ. ಅವರನ್ನು ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ. ಮತ್ತೊಬ್ಬ ವಿದ್ಯಾರ್ಥಿಯ ಭುಜಕ್ಕೂ ಗಂಭೀರ ಗಾಯವಾಗಿದೆ.
ಕಾಲೇಜಿನಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಎಸ್‌ಎಫ್‌ಐ-ಕೆಎಸ್‌ಯು ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಈ ವೇಳೆ ಹೊರಬಂದ ಯುವ ಕಾಂಗ್ರೆಸ್ ಕಾರ್ಯಕರ್ತರು ವಿದ್ಯಾರ್ಥಿಗೆ ಚಾಕುವಿನಿಂದ ಇರಿದಿದ್ದಾರೆ ಎನ್ನಲಾಗಿದೆ. ಧೀರಜ್ ಗೆ ಚಾಕುವಿನಿಂದ ಇರಿದವರು ಸ್ಥಳದಿಂದ ಪರಾರಿಯಾಗಿದ್ದಾರೆ.
ಧೀರಜ್ ಕುತ್ತಿಗೆಗೆ ಚಾಕುವಿನಿಂದ ಇರಿಯಲಾಗಿದೆ. ಸ್ಥಳೀಯರು ಮತ್ತು ವಿದ್ಯಾರ್ಥಿಗಳು ಅವರನ್ನು ಸಮೀಪದ ಇಡುಕ್ಕಿ ವೈದ್ಯಕೀಯ ಕಾಲೇಜಿಗೆ ಕರೆದೊಯ್ದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಅವರು ಸ್ಥಳದಲ್ಲೇ ಮೃತಪಟ್ಟಿದ್ದರು. ಮೃತದೇಹವನ್ನು ಇಡುಕ್ಕಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಇದೀಗ ಕಾಲೇಜಿನ ಒಳಗೆ ಹೊರಗಿನವರ ಪ್ರವೇಶ ವಿರೋಧಿಸಿ ತೀವ್ರ ಪ್ರತಿಭಟನೆ ನಡೆಯುತ್ತಿದೆ.