ಧರ್ಮಶಾಲಾ: ದ್ವಿತೀಯ ಟಿ20 ಪಂದ್ಯದಲ್ಲಿ ಪ್ರವಾಸಿ ಶ್ರೀಲಂಕಾ ವಿರುದ್ಧ ಭಾರತ ತಂಡ ಭರ್ಜರಿ 7 ವಿಕೆಟ್ ಗಳ ಜಯಸಾಧಿಸಿದ್ದು, ಆ ಮೂಲಕ 3 ಪಂದ್ಯಗಳ ಟಿ20 ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿ ಸರಣಿ ಕೈವಶ ಮಾಡಿಕೊಂಡಿದೆ.
ಧರ್ಮಶಾಲಾದ ಹಿಮಾಚಲ್ ಪ್ರದೇಶ್ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ತಂಡ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 183 ರನ್ ಗಳಿಸಿ, ಭಾರಕ್ಕೆ ಗೆಲ್ಲಲು 184ರನ್ ಗಳ ಸವಾಲಿನ ಗುರಿ ನೀಡಿತ್ತು. ಈ ಸವಾಲಿನ ಗುರಿಯನ್ನು ಬೆನ್ನು ಹತ್ತಿದ ಟೀಂ ಇಂಡಿಯಾ ಆರಂಭಿಕ ಆಘಾತದ ಹೊರತಾಗಿಯೂ ಶ್ರೇಯಸ್ ಅಯ್ಯರ್ (ಅಜೇಯ 74 ರನ್) ಹಾಗೂ ರವೀಂದ್ರ ಜಡೇಜಾ (ಅಜೇಯ 45 ರನ್) ಅಮೋಘ ಬ್ಯಾಟಿಂಗ್ ನೆರವಿನಿಂದ 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತು.
ಆ ಮೂಲಕ 3 ಪಂದ್ಯಗಳ ಟಿ20 ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿ ಸರಣಿ ಕೈವಶ ಮಾಡಿಕೊಂಡಿದೆ. ಭಾರತ ಪ್ರವಾಸವನ್ನು ಕೈಗೊಂಡಿರುವ ಶ್ರೀಲಂಕಾ ಟೀಮ್ ಇಂಡಿಯಾ ವಿರುದ್ಧ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಹಾಗೂ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾಗವಹಿಸುತ್ತಿದ್ದು, ಮೊದಲಿಗೆ ಟಿ ಟ್ವೆಂಟಿ ಸರಣಿಯಲ್ಲಿ ಸೋಲನ್ನು ಅನುಭವಿಸಿದೆ.
ಇತ್ತ ಇದಕ್ಕೂ ಮುನ್ನ ಭಾರತ ಪ್ರವಾಸವನ್ನು ಕೈಗೊಂಡಿದ್ದ ವೆಸ್ಟ್ ಇಂಡೀಸ್ ವಿರುದ್ಧ 3 ಪಂದ್ಯಗಳ ಏಕದಿನ ಸರಣಿ ಹಾಗೂ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಎಲ್ಲಾ ಪಂದ್ಯಗಳನ್ನು ಗೆದ್ದು ವೈಟ್ ವಾಷ್ ಸಾಧನೆ ಮಾಡಿದ್ದ ಟೀಮ್ ಇಂಡಿಯಾ ಇದೀಗ ಶ್ರೀಲಂಕಾ ವಿರುದ್ಧವೂ ಸಹ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಿದೆ.
ಸತತ 11ನೇ ಗೆಲುವು
ಈ ಪಂದ್ಯದ ಗೆಲುವಿನ ಮೂಲಕ ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮತ್ತೊಂದು ಸಾಧನೆ ಮಾಡಿದ್ದು, ಲಂಕಾ ವಿರುದ್ಧ ಈ ಗೆಲುವು ಟೀಮ್ ಇಂಡಿಯಾದ ಸತತ 11ನೇ ಅಂತಾರಾಷ್ಟ್ರೀಯ ಟಿ ಟ್ವೆಂಟಿ ಗೆಲುವಾಗಿದೆ.