ನವದೆಹಲಿ: 2022-2023ನೇ ಸಾಲಿನ ಕೇಂದ್ರ ಬಜೆಟ್ ಮಂಗಳವಾರ ಮಂಡನೆಯಾಗುತ್ತಿದೆ. ಕೊರೋನಾ ಸಾಂಕ್ರಾಮಿ ರೋಗ ಹಿನ್ನೆಲೆ ತೀವ್ರ ಆರ್ಥಿಕ ಸಂಕಷ್ಟ, ನಿರುದ್ಯೋಗ ಹೆಚ್ಚಳ, ಕೃಷಿ ಉದ್ಯಮ, ರಫ್ತು, ವಾಹನೋದ್ಯಮ ಸೇರಿದಂತೆ ಪ್ರತಿಯೊಂದು ವಲಯವೂ ಋಣಾತ್ಮಕ ಬೆಳವಣಿಗೆ ದಾಖಲಿಸಿದ್ದು, ಸಾಲು ಸಾಲು ಸವಾಲುಗಳ ನಡುವಲ್ಲೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ಮಾಡುತ್ತಿದ್ದಾರೆ.
ಬಜೆಟ್ ಮಂಡನೆಗೂ ಮುನ್ನ ಇಂದು ಬೆಳಿಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ತಮ್ಮ ತಂಡದೊಂದಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿದರು. ಬಳಿಕ ನಿರ್ಮಲಾ ಸೀತಾರಾಮನ್ ಹಾಗೂ ಹಣಕಾಸು ಇಲಾಖೆ ರಾಜ್ಯ ಸಚಿವರಾದ ಪಂಕಜ್ ಚೌಧರಿ ಮತ್ತು ಭಾಗವತ್ ಕರದ್ ಅವರು ಅಲ್ಲಿಂದ ಸಂಪುಟ ಸಭೆಗೆ ತೆರಳಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಬಜೆಟ್'ಗೆ ಅನುಮೋದನೆ ಪಡೆದುಕೊಳ್ಳಲಾಯಿತು.
ಹಣಕಾಸು ಸಚಿವೆಯಾದ ಬಳಿಕ ನಿರ್ಮಲಾ ಸೀತಾರಾಮನ್ ಅವರು ಮಂಡನೆ ಮಾಡುತ್ತಿರುವ ನಾಲ್ಕನೇ ಬಜೆಟ್ ಇದಾಗಿದೆ.