ಕಾಸರಗೋಡು: ಭಾರತೀಯ ಮಕ್ಕಳ ಕಲ್ಯಾಣ ಮಂಡಳಿಯ ಸೂಚನೆ ಮೇರೆಗೆ ಕೇರಳ ರಾಜ್ಯ ಮಕ್ಕಳ ಕಲ್ಯಾಣ ಸಮಿತಿಯು ಫೆ.20 ರಂದು ಜಿಲ್ಲಾ ಮಟ್ಟದಲ್ಲಿ ಮಕ್ಕಳಿಗಾಗಿ ರಾಷ್ಟ್ರಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಿದೆ. ನಾಯ್ಮಾರ್ ಮೂಲೆ ಎನ್‍ಎ ಮಾಡೆಲ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಕಾಸರಗೋಡು ಜಿಲ್ಲಾ ಮಟ್ಟದ ಸ್ಪರ್ಧೆಯನ್ನು ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರ್ ಚಂದ್ ಉದ್ಘಾಟಿಸಲಿದ್ದಾರೆ. ಕೋವಿಡ್ ನಿಯಮಾನುಸಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ರವರೆಗೆ ಸ್ಪರ್ಧೆ ನಡೆಯಲಿದೆ. ಬೆಳಗ್ಗೆ 9 ಗಂಟೆಗೆ ನೋಂದಣಿ ಆರಂಭವಾಗಲಿದೆ.
5 ರಿಂದ 9 ವರ್ಷದೊಳಗಿನ ಮಕ್ಕಳು ಬಿಳಿ ಗುಂಪಿನಲ್ಲಿ ಮತ್ತು 10-16 ವರ್ಷ ವಯಸ್ಸಿನ ಮಕ್ಕಳು ಹಸಿರು ಗುಂಪಿನಲ್ಲಿ ನೋಂದಾಯಿಸಿಕೊಳ್ಳಬೇಕು. ಐದು ಮತ್ತು ಹತ್ತು ವರ್ಷದೊಳಗಿನ ಅಂಗವಿಕಲ ಮಕ್ಕಳು ಹಳದಿ ಗುಂಪಿನಲ್ಲಿ ಮತ್ತು 11 ರಿಂದ 18 ವರ್ಷದೊಳಗಿನ ಮಕ್ಕಳು ಕೆಂಪು ಗುಂಪಿನಲ್ಲಿ ನೋಂದಾಯಿಸಿಕೊಳ್ಳಬೇಕು. ಸ್ಪರ್ಧೆಯನ್ನು ನಾಲ್ಕು ವಿಭಾಗಗಳಲ್ಲಿ ಆಯೋಜಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಕೃತಿಗಳನ್ನು ರಾಜ್ಯ ಮಟ್ಟದ ಸ್ಪರ್ಧೆಗಳಿಗೆ ಮತ್ತು ರಾಜ್ಯ ಮಟ್ಟದಲ್ಲಿ ಆಯ್ಕೆಯಾದ ಕೃತಿಗಳನ್ನು ರಾಷ್ಟ್ರೀಯ ಚಿತ್ರಕಲಾ ಸ್ಪರ್ಧೆಗೆ ಪರಿಗಣಿಸಲಾಗುತ್ತದೆ. ರಾಷ್ಟ್ರೀಯ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ 18 ವರ್ಷದವರೆಗೆ ಭಾರತೀಯ ಮಕ್ಕಳ ಕಲ್ಯಾಣ ಮಂಡಳಿಯಿಂದ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. ವಿಜೇತರಿಗೆ ನಗದು ಪುರಸ್ಕಾರ, ಪದಕ ಮತ್ತು ಪ್ರಮಾಣಪತ್ರಗಳನ್ನು ನೀಡಲಾಗುವುದು. ದೂರವಾಣಿ 9961001616