ಮಾಸ್ಕೋ: ಉಕ್ರೇನ್ ವಿರುದ್ಧ ವ್ಲಾಡಿಮಿರ್ ಪುಟಿನ್ ಯುದ್ಧ ಸಾರುತ್ತಿದ್ದಂತೆ ರಷ್ಯಾ ಯುದ್ಧ ವಿಮಾನಗಳು ಉಕ್ರೇನ್ ಮೇಲೆ ದಾಳಿ ಆರಂಭಿಸಿದ್ದು ಪ್ರಮುಖ ನೆಲೆಗಳ ಮೇಲೆ ದಾಳಿ ನಡೆಸಿದ್ದು ಅಪಾರ ಪ್ರಾಣ ಹಾನಿ ಸಂಭವಿಸಿದೆ.
ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ತುರ್ತು ಸಚಿವ ಸಭೆ ನಡೆಸಿದ್ದರು. ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು. ಸಭೆಯಲ್ಲಿ ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆ ಕುರಿತಂತೆ ಚರ್ಚೆ ನಡೆಸಲಾಗಿದೆ. ಈ ಸಭೆ ನಂತರ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಪ್ರಧಾನಿ ಮೋದಿ ದೂರವಾಣಿ ಕರೆ ಮಾಡಿ ಚರ್ಚೆ ನಡೆಸಿದರು.
ಪುಟಿನ್ ಜೊತೆ ಸುಮಾರು 25 ನಿಮಿಷಗಳ ಕಾಲ ಚರ್ಚೆ ನಡೆಸಲಾಗಿದೆ. ಈ ವೇಳೆ ತಕ್ಷಣ ಕದನ ವಿರಾಮ ಘೋಷಿಸುವಂತೆ ರಷ್ಯಾ ಅಧ್ಯಕ್ಷರಿಗೆ ಮನವಿ ಮಾಡಿದ್ದು. ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.
ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆ ಕುರಿತಂತೆ ಚರ್ಚೆ ನಡೆಸಲಾಗಿದ್ದು ಅವರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲು ಸಹಕರಿಸುವಂತೆ ಮನವಿ ಮಾಡಿದ್ದಾರೆ.
ಚರ್ಚೆ ವೇಳೆ ಪುಟಿನ್ ಉಕ್ರೇನ್ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡಿದ್ದಾರೆ. ಇದನ್ನು ಬಿಟ್ಟು ನಮಗೆ ಬೇರೆ ದಾರಿ ಇರಲಿಲ್ಲ. ಅಮೆರಿಕಾ ಮತ್ತು ನ್ಯಾಟೋ ಪಡೆ ಮಧ್ಯಪ್ರವೇಶಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.