ಬೆಂಗಳೂರು: ಉಡುಪಿಯಲ್ಲಿ ಆರಂಭವಾದ ಹಿಜಾಬ್ ವಿವಾದ ಇದೀಗ ಕರ್ನಾಟಕ ರಾಜ್ಯಾದ್ಯಂತ ವ್ಯಾಪಿಸಿದ್ದು, ಹಲವು ಕಡೆ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ ಸರ್ಕಾರ ನಾಳೆಯಿಂದ ಮೂರು ದಿನ ಹೈಸ್ಕೂಲ್ ಹಾಗೂ ಕಾಲೇಜ್ ಗಳಿಗೆ ರಜೆ ಘೋಷಿಸಿದೆ.
ಕರ್ನಾಟಕ ರಾಜ್ಯದಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಂತೆ ನಾನು ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಶಾಲಾ-ಕಾಲೇಜುಗಳ ಆಡಳಿತ ಮಂಡಳಿ ಹಾಗೂ ಕರ್ನಾಟಕದ ಜನತೆಗೆ ಮನವಿ ಮಾಡುತ್ತೇನೆ. ಮುಂದಿನ ಮೂರು ದಿನಗಳ ಕಾಲ ಎಲ್ಲಾ ಪ್ರೌಢಶಾಲೆಗಳು ಮತ್ತು ಕಾಲೇಜುಗಳಿಗೆ ರಜೆ ನೀಡಲು ನಾನು ಆದೇಶಿಸಿದ್ದೇನೆ. ಸಂಬಂಧಪಟ್ಟವರೆಲ್ಲರೂ ಸಹಕರಿಸಬೇಕಾಗಿ ವಿನಂತಿ ಎಂದು ಮುಖ್ಯಮಂತ್ರಿ ಬವಸರಾಜ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದಾರೆ.
ಕರ್ನಾಟಕ ರಾಜ್ಯದ ಹಲವು ಕಾಲೇಜುಗಳಲ್ಲಿ ಹಿಜಾಬ್ ವರ್ಸಸ್ ಕೇಸರಿ ಶಾಲು ವಿವಾದ ಹೆಚ್ಚಾದ ಕಾರಣ ಮತ್ತು ಹೈಕೋರ್ಟ್ ನಲ್ಲಿ ವಿವಾದಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ರಾಜ್ಯಾದ್ಯಂತ ಸರ್ಕಾರ ಹಾಗೂ ಖಾಸಗಿ ಪದವಿಪೂರ್ವ ಕಾಲೇಜ್ ಗಳಿಗೆ ಮೂರು ದಿನ ರಜೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಅವರು ಹೇಳಿದ್ದಾರೆ.