ತಿರುವನಂತಪುರ: ಕೇಂದ್ರ ಸರಕಾರ ಮಂಜೂರು ಮಾಡಿರುವ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ರಾಜ್ಯ ಸರಕಾರ ಗಂಭೀರ ತಪ್ಪು ಮಾಡುತ್ತಿದ್ದು, ಪರಿಶಿಷ್ಟ ಜಾತಿಯವರಿಗೆ ಕೇಂದ್ರ ಸರಕಾರದ ಯೋಜನೆಗಳ ಲಾಭ ಸಿಗದಿರುವುದಕ್ಕೆ ಇದೇ ಕಾರಣ ಎಂದು ಕೇಂದ್ರ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಹೇಳಿದ್ದಾರೆ. ಕೇರಳದಲ್ಲಿ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸುವ ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ ಎಂದರು.
ಬಿಜೆಪಿ-ಪರಿಶಿಷ್ಟ ಜಾತಿ ಮೋರ್ಚಾ ಹಾಗೂ ಸಾಮಾಜಿಕ ನ್ಯಾಯ ಕ್ರಿಯಾ ಸಮಿತಿ ಜಂಟಿಯಾಗಿ ಆಯೋಜಿಸಿದ್ದ ಪರಿಶಿಷ್ಟ ಜಾತಿ ಮತ್ತು ಪಂಗಡದ ಮುಖಂಡರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನ್ಯಾಯಮೂರ್ತಿ ರಂಗನಾಥ ಮಿಶ್ರಾ ಆಯೋಗದ ವರದಿಯನ್ನು ಜಾರಿಗೊಳಿಸುವ ಉದ್ದೇಶ ಕೇಂದ್ರ ಸರ್ಕಾರಕ್ಕೆ ಇಲ್ಲ ಎಂದ ಅವರು, ಕೇರಳದಲ್ಲಿ ಈ ಬಗ್ಗೆ ನಡೆಯುತ್ತಿರುವ ಅಪಪ್ರಚಾರವನ್ನು ತಿರಸ್ಕರಿಸಬೇಕು. ಬಿಜೆಪಿ ಪರಿಶಿಷ್ಟ ಸಮುದಾಯದ ಪರವಾಗಿ ನಿಂತಿರುವ ಪಕ್ಷ. ದೇಶದಲ್ಲಿ ಪರಿಶಿಷ್ಟ ಜಾತಿ ಸಮುದಾಯದ ಶ್ರೇಯೋಭಿವೃದ್ಧಿಗೆ ಕೇಂದ್ರ ಸರಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಎಂದು ಅವರು ತಿಳಿಸಿದರು.