ಲಖನೌ: ಇತ್ತೀಚಿಗೆ ನಡೆದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಯೋಗಿ ಆದಿತ್ಯನಾಥ್ ಸತತ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಶುಕ್ರವಾರ ಪದಗ್ರಹಣ ಮಾಡಿದರು.
ಅಟಲ್ ಬಿಹಾರ ವಾಜಪೇಯಿ ಎಕತಾ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಯೋಗಿ ಆದಿತ್ಯನಾಥ್ ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯಪಾಲರಾದ ಆನಂದಿಬೇನ್ ಪಟೇಲ್ ಪ್ರಮಾಣ ವಚನ ಬೋಧಿಸಿದರು. ಹಾಗೂ ಸುಮಾರು 85, 000 ಜನರು ಈ ಸಮಾರಂಭಕ್ಕೆ ಸಾಕ್ಷಿಯಾದರು. ಇದೇ ಸಂದರ್ಭದಲ್ಲಿ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್ ಉತ್ತರ ಪ್ರದೇಶದ ನೂತನ ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.