ನವದೆಹಲಿ: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದಲ್ಲಿ ಭಾರತಕ್ಕೆ ದೊಡ್ಡ ಸವಾಲು ಎಂದರೆ ಅಲ್ಲಿನ ಹೆಚ್ಚಿನ ಸಂಖ್ಯೆಯ ಭಾರತೀಯ ವಿದ್ಯಾರ್ಥಿಗಳು ಸಿಕ್ಕಿಬಿದ್ದಿರುವುದು. ಇದರಲ್ಲಿ ವೈದ್ಯಕೀಯ ವಿದ್ಯಾರ್ಥಿಗಳ ಸಂಖ್ಯೆಯೂ ಹೆಚ್ಚು. ಈ ಕಾರಣದಿಂದಾಗಿ, ದೇಶದಲ್ಲಿ ವೈದ್ಯಕೀಯ ಶಿಕ್ಷಣಕ್ಕಾಗಿ ಸೀಟುಗಳ ಕೊರತೆಯ ಬಗ್ಗೆ ಚರ್ಚೆ ಆರಂಭವಾಗಿದೆ.
ಈ ಮಧ್ಯೆ, ಪ್ರಧಾನಿ ಮೋದಿ ಅವರು ಸಣ್ಣ ಪುಟ್ಟ ರಾಷ್ಟ್ರಗಳಲ್ಲಿ ನಮ್ಮ ದೇಶದ ವಿದ್ಯಾರ್ಥಿಗಳು ಅಧ್ಯಯನಕ್ಕೆ ತೆರಳುತ್ತಿರುವ ಬಗ್ಗೆ ಮಾತನಾಡಿದ್ದರು. ಅಲ್ಲದೆ, ವೈದ್ಯಕೀಯ ಕಾಲೇಜುಗಳ ಸ್ಥಾಪನೆ ಬಗ್ಗೆ ಭಾರತೀಯ ಉದ್ಯಮಿಗಳು ಗಮನ ಹರಿಸಬೇಕು ಎಂದು ಸೂಚಿಸಿದ್ದರು. ಇದೀಗ ಆನಂದ್ ಮಹೀಂದ್ರಾ ಕೂಡ ಟ್ವೀಟ್ ಮಾಡಿ ಮಹತ್ವದ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ.
ಆನಂದ್ ಮಹೀಂದ್ರಾ ಅವರು ಈ ಹಿಂದೆ, ಟ್ವಿಟರ್‌ನಲ್ಲಿ ತಮ್ಮ ಕನಸಿನ ಯೋಜನೆಗಳ ಬಗ್ಗೆ ಮಾಹಿತಿ ಶೇರ್ ಮಾಡಿಕೊಳ್ಳುತ್ತಿದ್ದರು. ಈಗ ಮಹೀಂದ್ರಾ ಅವರು, ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ಅದರಲ್ಲೂ ವೈದ್ಯಕೀಯ ವಿದ್ಯಾರ್ಥಿಗಳ ಸ್ಥಿತಿಯನ್ನು ತಿಳಿದುಕೊಳ್ಳುವ ಹಾಗೂ ಅವರ ಸಮಸ್ಯೆ ಬಗೆಹರಿಸುವತ್ತ ಚಿತ್ತ ಹರಿಸಿದ್ದಾರೆ.
ಮಹೀಂದ್ರಾ ವಿಶ್ವವಿದ್ಯಾನಿಲಯ
ಆನಂದ್ ಮಹೀಂದ್ರ ಟ್ವಿಟ್ಟರ್ ನಲ್ಲಿ “ಭಾರತದಲ್ಲಿ ವೈದ್ಯಕೀಯ ಕಾಲೇಜುಗಳ ಕೊರತೆ ಇದೆ ಅನ್ನೋ ಬಗ್ಗೆ ಗೊತ್ತಿರಲಿಲ್ಲ. ಅವರು ತಮ್ಮ ಕಂಪನಿಯ ಟೆಕ್ ಮಹೀಂದ್ರಾದ MD ಮತ್ತು CEO, C.P. ಗುರ್ನಾನಿ ಅವರನ್ನು ಟ್ಯಾಗ್ ಮಾಡಿ, ‘ಮಹೀಂದ್ರಾ ವಿಶ್ವವಿದ್ಯಾಲಯದಲ್ಲಿ ವೈದ್ಯಕೀಯ ಶಿಕ್ಷಣಕ್ಕಾಗಿ ಒಂದು ಸಂಸ್ಥೆಯನ್ನು ಸ್ಥಾಪಿಸುವ ಬಗ್ಗೆ ನಾವು ಯೋಚಿಸಬಹುದೇ?’ ಎಂದು ಪ್ರಶ್ನೆ ಮಾಡಿದ್ದಾರೆ.