ನವದೆಹಲಿ: ರಷ್ಯಾ-ಉಕ್ರೇನ್ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಶುಕ್ರವಾರ ಉನ್ನತ ಮಟ್ಟದ ಸಭೆ ನಡೆಯುತ್ತಿದೆ.
ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕರೆ ತರುವುದು ಸೇರಿದಂತೆ ಈಗಿನ ಬೆಳವಣಿಗೆಗಳ ಬಗ್ಗೆ ಪ್ರಧಾನಿ ಮೋದಿ ಚರ್ಚೆ ನಡೆಸುತ್ತಿದ್ದಾರೆ.
ಕೇಂದ್ರ ಸಚಿವ ಪಿಯೂಷ್ ಗೋಯಲ್, ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ಹರ್ಷವರ್ಧನ್ ಶೃಂಗ್ಲಾ, ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಸೇರಿದಂತೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದಾರೆ.
ಉಕ್ರೇನ್‌ನಿಂದ ಭಾರತೀಯರನ್ನು ಮರಳಿಸಲು ಆರಂಭಿಸಿರುವ 'ಆಪರೇಷನ್ ಗಂಗಾ' ಅಡಿಯಲ್ಲಿ ನಡೆಯುತ್ತಿರುವ ಪ್ರಯತ್ನಗಳ ಕುರಿತು ಪ್ರಧಾನಿ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಐದನೇ ಪರಿಶೀಲನಾ ಸಭೆ ಇದಾಗಿದೆ.
18 ಸಾವಿರ ಭಾರತೀಯರು ಇದುವರೆಗೆ ಉಕ್ರೇನ್ ತೊರೆದಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಗುರುವಾರ ತಿಳಿಸಿತ್ತು.