ಕಾಸರಗೋಡು: ಕೇರಳದಲ್ಲಿ ಸಂಪೂರ್ಣ ಸಾಕ್ಷರತೆಯ ಘೋಷಣೆಯ ದಿನವಾದ ಏಪ್ರಿಲ್ 18 ರಂದು ಸಾಕ್ಷರತಾ ಮಿಷನ್ ಆಶ್ರಯದಲ್ಲಿ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲಾ ಸಾಕ್ಷರತಾ ಮಿಷನ್ ಹಾಗೂ ಸ್ಥಳೀಯಾಡಳಿತ ಸಂಸ್ಥೆಗಳ ಸಹಯೋಗದಲ್ಲಿ ಜಿಲ್ಲೆಯ ಎಲ್ಲೆಡೆ ವಿವಿಧೆಡೆ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಬೆಳಗ್ಗೆ 10.30ಕ್ಕೆ ಜಿಲ್ಲಾ ಯೋಜನಾ ಸಭಾಂಗಣದಲ್ಲಿ ನಡೆಯುವ ಸಮಾರಂಭವನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್ ಉದ್ಘಾಟಿಸುವರು. ಜಿಲ್ಲಾ ಪಂಚಾಯಿತಿ ಆರೋಗ್ಯ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ನ್ಯಾಯವಾದಿ ಎಸ್.ಎನ್.ಸರಿತಾ ಅಧ್ಯಕ್ಷತೆ ವಹಿಸುವರು. ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರ್ ಚಂದ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಈ ಸಂದರ್ಭ ಜಿಲ್ಲೆಯ ಹಿರಿಯ ಸಾಕ್ಷರತಾ ಕಲಿಕೆದಾರರನ್ನು ಸನ್ಮಾನಿಸಿ, ಪ್ರಮಾಣ ಪತ್ರ ನೀಡಲಾಗುವುದು. 1990-91ರ ಅವಧಿಯಲ್ಲಿ ಜಿಲ್ಲೆಯಲ್ಲಿ ಸಮಗ್ರ ಸಾಕ್ಷರತಾ ಆಂದೋಲನದ ಚುಕ್ಕಾಣಿ ಹಿಡಿದ ಮಾಜಿ ಸಾಕ್ಷರತಾ ಹೋರಾಟಗಾರರನ್ನು ಸಮಾರಂಭದಲ್ಲಿ ಸನ್ಮಾನಿಸಲಾಗುವುದು.