ಶಿವಮೊಗ್ಗ:ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಗುರುವಾರ ಪ್ರಕಟಿಸಿದ್ದಾರೆ.
ಇಂದು ಸಂಜೆ ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೊಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಈಶ್ವರಪ್ಪ ಅವರು, ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಉದ್ದೇಶದಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದು, ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಯಾವುದೇ ತಪ್ಪು ಮಾಡಿಲ್ಲ. ನಾನು ತಪ್ಪು ಮಾಡಿದ್ದರೆ ದೇವರು ನನಗೆ ಶಿಕ್ಷೆ ನೀಡಲಿ. ಎಲ್ಲವನ್ನೂ ಎದುರಿಸಿ ಆರೋಪಮುಕ್ತವಾಗಿ ಹೊರ ಬರುತ್ತೇನೆ ಎಂದು ಈಶ್ವರಪ್ಪ ಅವರು ಹೇಳಿದ್ದಾರೆ.
ನಾನು ದೇವರನ್ನು ನಂಬಿದ್ದೇನೆ.. 40% ಕಮಿಷನ್ ಆರೋಪದಿಂದ ಮುಕ್ತನಾಗಿ ಶೀಘ್ರವಾಗಿ ಹೊರಬರುತ್ತೇನೆ. ತನಿಖೆಗೆ ನನ್ನ ಸಂಪೂರ್ಣ ಸಹಕಾರ ಇರುತ್ತದೆ. ಸಚಿವನಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ ಕೇಂದ್ರ ಹಾಗೂ ರಾಜ್ಯದ ಎಲ್ಲ ನಾಯಕರಿಗೂ ಧನ್ಯವಾದ ಸಲ್ಲಿಸುವೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ರಾಜ್ಯ ಸರ್ಕಾರಕ್ಕೆ ತೀವ್ರ ತಲೆನೋವಾಗಿ ಪರಿಣಮಿಸಿತ್ತು. ಕಾಂಗ್ರೆಸ್, ಜೆಡಿಎಸ್, ಆಮ್ ಆದ್ಮಿ ಪಾರ್ಟಿ, ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದವು. ಅಲ್ಲದೆ, ಒಂದು ಹೆಜ್ಜೆ ಮುಂದೆ ಇಟ್ಟಿದ್ದ ಕಾಂಗ್ರೆಸ್ ನಾಯಕರು, ವಿಧಾನಸೌಧಲ್ಲಿ 24 ಗಂಟೆ ಅಹೋರಾತ್ರಿ ಧರಣಿ ಆರಂಭಿಸಿದ್ದರು.
ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಈಶ್ವರಪ್ಪ ಅವರು ರಾಜೀನಾಮೆ ನೀಡಬೇಕು ಮತ್ತು ಅವರನ್ನು ಬಂಧಿಸಬೇಕು ಎಂದು ಪ್ರತಿಪಕ್ಷ ಕಾಂಗ್ರೆಸ್ ರಾಜ್ಯ ಸರ್ಕಾರದ ಮೇಲೆ ತೀವ್ರ ಒತ್ತಡ ಹಾಕಿತ್ತು. ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿತ್ತು.