ನವದೆಹಲಿ: ಕಾಂಗ್ರೆಸ್‌ನ ಪ್ರಮುಖ ನಾಯಕರು ಶನಿವಾರ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಭೇಟಿಯಾಗಿ ಪ್ರಸ್ತುತ ರಾಜಕೀಯ ಪರಿಸ್ಥಿತಿ ಕುರಿತು ಚರ್ಚಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಮುಂಬರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ಪಕ್ಷದ ಕಾರ್ಯತಂತ್ರ ಮತ್ತು ರಾಜಸ್ಥಾನದಲ್ಲಿ ಪಕ್ಷದ 'ಚಿಂತನ ಶಿಬಿರ' ನಡೆಸುವ ಬಗ್ಗೆಯೂ ಕಾಂಗ್ರೆಸ್ ನಾಯಕರು ಚರ್ಚಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ತಳಮಟ್ಟದಲ್ಲಿ ಸಂಘಟನೆಯನ್ನು ಬಲಪಡಿಸಲು ಮತ್ತು ಪಕ್ಷದಲ್ಲಿ ಬದಲಾವಣೆಗಳನ್ನು ಸೂಚಿಸಲು, ಮತ್ತು ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಈ ತಿಂಗಳ ಕೊನೆಯಲ್ಲಿ ಕಾಂಗ್ರೆಸ್ ಚಿಂತನ ಮಂಥನ ಸಭೆ ನಡೆಸಲಿದೆ.
ಇಂದು ಸೋನಿಯಾ ಗಾಂಧಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆ ಸಿ ವೇಣುಗೋಪಾಲ್, ಅಂಬಿಕಾ ಸೋನಿ, ಅಜಯ್ ಮಾಕೆನ್ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಭಾಗವಹಿಸಿದ್ದರು.
ಈ ಸಭೆಯಲ್ಲಿ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಕೂಡ ಭಾಗವಹಿಸಿದ್ದರು ಎಂದು ಮೂಲಗಳು ತಿಳಿಸಿವೆ.
ಇಲ್ಲಿಯವರೆಗೂ ಬಿಜೆಪಿ, ಟಿಎಂಸಿ ಸೇರಿದಂತೆ ಹಲವು ರಾಜಕೀಯ ಪಕ್ಷಗಳಿಗೆ ಆಯಕಟ್ಟಿನ ಸಲಹೆಗಾರನ ಪಾತ್ರ ನಿರ್ವಹಿಸಿರುವ ಪ್ರಶಾಂತ್ ಕಿಶೋರ್ ಬಗ್ಗೆ ಕಾಂಗ್ರೆಸ್ ಇದೀಗ ದೊಡ್ಡ ಘೋಷಣೆ ಮಾಡುವ ಸಾಧ್ಯತೆ ಇದೆ.
ಪ್ರಶಾಂತ್ ಕಿಶೋರ್ ಅವರ ತಂಡ ಗುಜರಾತ್ ನಲ್ಲೂ ಸಮೀಕ್ಷೆ ನಡೆಸುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಸಭೆಗೂ ಮುನ್ನ ಪ್ರಶಾಂತ್ ಕಿಶೋರ್ ಅವರು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ್ದರು. ಪಂಜಾಬ್ ಚುನಾವಣೆಗೂ ಮುನ್ನವೇ ಪ್ರಶಾಂತ್ ಕಿಶೋರ್ ಅವರು ಕಾಂಗ್ರೆಸ್ ಉನ್ನತ ನಾಯಕರೊಂದಿಗೆ ಹಲವು ಬಾರಿ ಸಭೆ ನಡೆಸಿದ್ದರು. ಈ ವೇಳೆ ಅವರು ಕಾಂಗ್ರೆಸ್ ಸೇರುವ ಬಗ್ಗೆಯೂ ಊಹಾಪೋಹಗಳು ಹಬ್ಬಿದ್ದವು. ಆದರೆ, ಕಿಶೋರ್ ಹಾಗೂ ಕಾಂಗ್ರೆಸ್ ನಡುವಿನ ಮಾತುಕತೆ ಫಲಕಾರಿಯಾಗಲಿಲ್ಲ. ಈ ವರ್ಷದ ಕೊನೆಯಲ್ಲಿ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಚುನಾವಣೆಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕರನ್ನು ಪ್ರಶಾಂತ್ ಕಿಶೋರ್ ಭೇಟಿ ಮಾಡಿರುವುದು ಕಾಂಗ್ರೆಸ್ ನಲ್ಲಿ ಬದಲಾವಣೆಯಾಗಲಿದೆ ಎಂಬ ಬಗ್ಗೆ ಮಾಹಿತಿಗಳು ಹರಿದಾಡುತ್ತಿವೆ.