ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕೋವಿಡ್-19 ಸ್ಥಿತಿಗತಿಗಳ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ಸಭೆಯಲ್ಲಿ ರಾಜಕಾರಣ ಮಾಡಿದರು ಎಂದು ಪ್ರತಿಪಕ್ಷಗಳು ಆರೋಪಿಸಿವೆ.
ತೈಲ ಬೆಲೆಯ ವಿಷಯವನ್ನು ಪ್ರಸ್ತಾಪಿಸಿ, ಪೆಟ್ರೋಲ್, ಡೀಸೆಲ್ ಗಳ ಮೇಲಿನ ವ್ಯಾಟ್ ಇಳಿಕೆಗೆ ರಾಜ್ಯಗಳಿಗೆ ಸೂಚಿಸುವ ಮೂಲಕ ಹೊಣೆಗಾರಿಕೆಯನ್ನು ವರ್ಗಾವಣೆ ಮಾಡಿದ್ದಾರೆ ಎಂದು ಪ್ರತಿಪಕ್ಷಗಳು ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿವೆ.
ವಿಪಕ್ಷಗಳ ವಿರುದ್ಧ ಪ್ರತಿವಾಗ್ದಾಳಿ ನಡೆಸಿರುವ ಬಿಜೆಪಿ, ಪ್ರತಿ ಲೀಟರ್ ಪೆಟ್ರೋಲ್, ಡೀಸೆಲ್ ಗೆ ವಿಪಕ್ಷಗಳ ಸರ್ಕಾರ ಇರುವೆಡೆ ಬಿಜೆಪಿ ಸರ್ಕಾರಕ್ಕಿಂತಲೂ ಹೆಚ್ಚಿನ ಆದಾಯ ಬರುತ್ತಿದೆ ಎಂದು ಪ್ರತ್ಯಾರೋಪ ಮಾಡಿದೆ.
ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮಾತನಾಡಿ, ಕೆಲವು ರಾಜ್ಯಗಳು ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ನ್ನು ಕಡಿಮೆ ಮಾಡಿಲ್ಲ ಎಂದು ಕಳೆದ ನವೆಂಬರ್ ನಲ್ಲಿ ಹೇಳಿದ ಬಳಿಕ ಕೇಂದ್ರ ಸರ್ಕಾರ ಮಹಾರಾಷ್ಟ್ರಕ್ಕೆ 26,500 ಕೋಟಿ ರೂಪಾಯಿ ಬಾಕಿ ನೀಡಬೇಕಿದೆ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರದೆಡೆಗೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತದೆ ಎಂದು ಠಾಕ್ರೆ ಆರೋಪಿಸಿದ್ದು, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ರಾಜ್ಯ ಸರ್ಕಾರ ಹೊಣೆಯಲ್ಲ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ರಣ್ದೀಪ್ ಸುರ್ಜೆವಾಲ, ಬಿಜೆಪಿ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ತೆರಿಗೆಯಿಂದ ಸಂಗ್ರಹಿಸಲಾಗಿರುವ 27 ಲಕ್ಷ ಕೋಟಿಯ ವಿವರಗಳನ್ನು ನೀಡಬೇಕೆಂದು ಆಗ್ರಹಿಸಿದ್ದಾರೆ.