ಕೋಲ್ಕತ್ತ: ಉತ್ತರ ಕೋಲ್ಕತ್ತದ ಕಾಶಿಪುರ ಪ್ರದೇಶದಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರ ಮೃತದೇಹ ಶುಕ್ರವಾರ ಬೆಳಿಗ್ಗೆ ಪತ್ತೆಯಾಗಿದೆ.
ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಅರ್ಜುನ್ ಚೌರಾಸಿಯಾ ಅವರ ಮೃತದೇಹ ಘೋಷ್ ಬಗಾನ್ ಪ್ರದೇಶದ ನಿರ್ಜನ ಕಟ್ಟಡವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನನ್ನು ಹತ್ಯೆ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಆದರೆ, ಈ ಆರೋಪವನ್ನು ಟಿಎಂಸಿ ಅಲ್ಲಗಳೆದಿದೆ.
ನಮ್ಮ ವಿರುದ್ಧ ಮಾಡಲಾಗಿರುವ ಆರೋಪ ಆಧಾರರಹಿತ. ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸಲಿ' ಎಂದು ಟಿಎಂಸಿ ಸಂಸದ ಶಂತನು ಸೇನ್ ಹೇಳಿದ್ದಾರೆ.
ಈ ಮಧ್ಯೆ, ಎರಡು ದಿನಗಳ ಪಶ್ಚಿಮ ಬಂಗಾಳ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾರ್ಯಕರ್ತನ ಮನೆಗೆ ಭೇಟಿ ನೀಡಿದ್ದಾರೆ ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.
'ಅವರು (ಅರ್ಜುನ್ ಚೌರಾಸಿಯಾ) ಪಕ್ಷದ ಪ್ರಮಾಣಿಕ ಕಾರ್ಯಕರ್ತರಾಗಿದ್ದರು' ಎಂದು ಬಿಜೆಪಿಯ ರಾಜ್ಯ ಘಟಕದ ವಕ್ತಾರ ಸಮಿಕ್ ಭಟ್ಟಾಚಾರ್ಯ ಹೇಳಿದ್ದಾರೆ.
'ಕಾರ್ಯಕರ್ತನ ಸಾವಿನಿಂದ ಅಮಿತ್ ಶಾ ಆಘಾತಕ್ಕೊಳಗಾಗಿದ್ದಾರೆ. ವಿಮಾನ ನಿಲ್ದಾಣದಲ್ಲಿ ಆಯೋಜಿಸಿರುವ ಸ್ವಾಗತ ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ಸೂಚಿಸಿದ್ದಾರೆ' ಎಂದು ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ.
'ಚೌರಾಸಿಯಾ ಸಾವನ್ನು ಕೇಂದ್ರ ಗೃಹ ಸಚಿವಾಲಯ ಗಂಭೀರವಾಗಿ ಪರಿಗಣಿಸಿದೆ. ಈ ವಿಚಾರವಾಗಿ ರಾಜ್ಯದಿಂದ ವರದಿ ಕೇಳಿದೆ' ಎಂದು ಅಮಿತ್ ಶಾ ಹೇಳಿದ್ದಾರೆ.