ಉದಯಪುರ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾಧ್ಯಮಗಳ ಮುಂದೆ ಬರದಿರುವುದು ಏಕೆ ಎಂಬುದು ಅರ್ಥವಾಗುತ್ತಿಲ್ಲ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ರಾಜಸ್ಥಾನದ ಉದಯಪುರದಲ್ಲಿಂದು ನವ ಸಂಕಲ್ಪ ಶಿಬಿರ ಆರಂಭಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ನಮ್ಮ ಪ್ರಜಾಪ್ರಭುತ್ವ, ಸಂವಿಧಾನವನ್ನು ರಕ್ಷಿಸುವುದು ಬಹಳ ಮುಖ್ಯವಾಗಿದೆ. ಬಿಜೆಪಿಯವರು ಭಿನ್ನಾಭಿಪ್ರಾಯ ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ. ವಾಕ್ ಸ್ವಾತಂತ್ರ್ಯದ ಹಕ್ಕನ್ನು ರಕ್ಷಿಸಬೇಕಾದ ಅಗತ್ಯವಿದೆ ಎಂದರು.
ಒಂದು ಕುಟುಂಬ, ಒಂದೇ ಟಿಕೆಟ್ ನಿಯಮಕ್ಕೆ ಕಾಂಗ್ರೆಸ್ ನಲ್ಲಿ ಸಂಪೂರ್ಣ ಸಹಮತವಿದೆ. ಚಿಂತನ ಶಿಬಿರದ ನಂತರ ಪಕ್ಷದಲ್ಲಿ ದೊಡ್ಡ ಮಟ್ಟದಲ್ಲಿ ಸಾಂಸ್ಥಿಕ ಬದಲಾವಣೆಗಳಾಗಲಿವೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಅಜಯ್ ಮಾಕೆನ್ ಹೇಳಿದರು.
ನವ ಸಂಕಲ್ಪ ಶಿಬಿರದಲ್ಲಿ ರಾಜ್ಯ ನಾಯಕರ ಸಮ್ಮಿಲನವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಕೇಂದ್ರ ಸಚಿವರಾದ ಎಂ. ವೀರಪ್ಪ ಮೊಯ್ಲಿ, ಮಾರ್ಗರೇಟ್ ಆಳ್ವ ಸೇರಿದಂತೆ ರಾಜ್ಯದ ಕಾಂಗ್ರೆಸ್ ನಾಯಕರು ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ.