ವಯನಾಡು: ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ವಯನಾಡು ಜಿಲ್ಲೆಯ ಸಮಸ್ಯೆಗಳನ್ನು ಖುದ್ದು ಪರಿಶೀಲನೆ ನಡೆಸಿದರು. ಸ್ಮೃತಿ ಇರಾನಿ ಮಾತನಾಡಿ, ಜಿಲ್ಲೆಯ ಜನರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ನೂರಾರು ರೈತರ ಬಳಿ ಕಿಸಾನ್ ಕ್ರೆಡಿಟ್ ಕಾರ್ಡ್ ಇಲ್ಲ. ಸಂಸದ ರಾಹುಲ್ ಗಾಂಧಿ ಜನರ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಜವಾಬ್ದಾರಿ ನಿರ್ವಹಿಸುತ್ತಿಲ್ಲ ಎಂದು ಸ್ಮೃತಿ ಇರಾನಿ ಆರೋಪಿಸಿದ್ದಾರೆ.
ವಯನಾಡಿನ ಅಂಗನವಾಡಿ ಸೇರಿದಂತೆ ವಿವಿಧೆಡೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಸಚಿವರು ಮಾತನಾಡಿದರು.
ಜಿಲ್ಲೆಯಲ್ಲಿ ಅರಣ್ಯ ಪ್ರದೇಶ ಸೇರಿದಂತೆ ವಿವಿಧ ವಲಯಗಳಲ್ಲಿ ಸಮಸ್ಯೆ ಎದುರಿಸುತ್ತಿದೆ. ಕುಡಿಯುವ ನೀರಿನ ಅಭಾವ ತೀವ್ರವಾಗಿದೆ. ಇದನ್ನು ನಿವಾರಿಸಲು 2023ರ ವೇಳೆಗೆ ಎಲ್ಲಾ ಅರಣ್ಯ ಕಾಲೋನಿಗಳಿಗೆ ಕುಡಿಯುವ ನೀರು ಒದಗಿಸಲು ಕ್ರಮಕೈಗೊಳ್ಳಲಾಗುವುದು ಎಂದು ಸ್ಮೃತಿ ಇರಾನಿ ಹೇಳಿದರು. ಆದಿವಾಸಿಗಳಿಗೆ ಭೂಮಿ ನೀಡುವುದಾಗಿ ಕೇಂದ್ರ ಸಚಿವರು ಹೇಳಿದರು.
ಸ್ಮೃತಿ ಇರಾನಿ ಅವರು ಅಮೇಥಿಯಲ್ಲಿನ ಅಭಿವೃದ್ಧಿ ಕಾರ್ಯಗಳು ಮತ್ತು ಜನರ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದರು. ರಾಹುಲ್ ಗಾಂಧಿ ಮುಂದಿನ ಚುನಾವಣೆಯಲ್ಲಿ ವಯನಾಡಿನಲ್ಲಿ ಸಂಸದರಾಗಿ ಸ್ಪರ್ಧಿಸುತ್ತಾರೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಸ್ಮೃತಿ ಇರಾನಿ ಉತ್ತರಿಸಿದರು. ನಾನು ರಾಹುಲ್ ಗಾಂಧಿ ಅಲ್ಲ, ಅಮೇಠಿಯಿಂದ ಓಡಿಹೋಗುವುದಿಲ್ಲ ಎಂದು ಸ್ಮೃತಿ ಇರಾನಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಯೋಜನೆಗಳು ರಾಜ್ಯದ ಜನತೆಗೆ ಸರಿಯಾಗಿ ತಲುಪುತ್ತಿಲ್ಲ. ವಯನಾಡಿನಲ್ಲಿ ಆದಿವಾಸಿಗಳು ಅನೇಕ ಆರೋಗ್ಯ ಮತ್ತು ಶೈಕ್ಷಣಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕಲ್ಯಾಣ ಯೋಜನೆ ಜಾರಿಗೊಳಿಸಲು ಜಿಲ್ಲಾಧಿಕಾರಿ ಜತೆ ಚರ್ಚಿಸಿದರು. ಜಿಲ್ಲೆಯ ಸಮಸ್ಯೆಗಳ ಕುರಿತು ಜಿಲ್ಲಾಧಿಕಾರಿ ಹಾಗೂ ಸಾಮಾಜಿಕ ನ್ಯಾಯ ಇಲಾಖೆಯಿಂದ ಸ್ಪಷ್ಟನೆ ಕೇಳಿರುವುದಾಗಿ ಸ್ಮೃತಿ ಇರಾನಿ ತಿಳಿಸಿದ್ದಾರೆ.