ನವದೆಹಲಿ: ದೇಶದಲ್ಲಿ ಗೋಧಿ ಸಾಕಷ್ಟು ಲಭ್ಯವಿದ್ದು, ಬೆಲೆ ಏರಿಕೆಯನ್ನು ನಿಯಂತ್ರಿಸಲು ಅದರ ರಫ್ತಿನ ಮೇಲೆ ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ಕೇಂದ್ರ ಸರ್ಕಾರ ಶನಿವಾರ ಸ್ಪಷ್ಟಪಡಿಸಿದೆ.
ನಿನ್ನೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಆಹಾರ ಕಾರ್ಯದರ್ಶಿ ಸುಧಾಂಶು ಪಾಂಡೆ, ವಾಣಿಜ್ಯ ಕಾರ್ಯದರ್ಶಿ ಬಿವಿಆರ್ ಸುಬ್ರಮಣ್ಯಂ ಮತ್ತು ಕೃಷಿ ಕಾರ್ಯದರ್ಶಿ ಮನೋಜ್ ಅಹುಜಾ ಅವರು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಗೋಧಿ ಬೆಲೆ ಹೆಚ್ಚಾಗುತ್ತಿದ್ದು, ಇದರಿಂದ ದೇಶದಲ್ಲೂ ಅದರ ಬೆಲೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದಾಗಿ ಅದರ ರಫ್ತು ನಿಷೇಧಿಸಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ.
ಗೋಧಿ ಬೆಲೆಯು ದೇಶೀಯ ಮಾರುಕಟ್ಟೆಯಲ್ಲಿ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) ಗಿಂತ ಹೆಚ್ಚಿದೆ ಎಂದು ಕೇಂದ್ರ ಸರ್ಕಾರ ಈ ಹಿರಿಯ ಅಧಿಕಾರಿಗಳು ತಿಳಿಸಿದರು.
ನೆರೆಯ ಹಾಗೂ ಆಹಾರ ಬಿಕ್ಕಟ್ಟನ್ನು ಎದುರಿಸುತ್ತಿರುವ ರಾಷ್ಟ್ರಗಳಿಂದ ಈಗಾಗಲೇ ಇರುವ ಹಳೆಯ ರಫ್ತು ಆದೇಶಗಳನ್ನು ಪೂರೈಸುವ ಕಾರ್ಯ ಮುಂದುವರಿಯುತ್ತದೆ ಎಂದು ಅವರು ಹೇಳಿದ್ದಾರೆ.