ನವದೆಹಲಿ: ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ತ್ರಿಪುರಾ ಮುಖ್ಯಮಂತ್ರಿ ಸ್ಥಾನಕ್ಕೆ ಬಿಪ್ಲಬ್ ಕುಮಾರ್ ದೇಬ್ ಅವರು ಶನಿವಾರ ರಾಜೀನಾಮೆ ನೀಡಿದ್ದು, ನೂತನ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ಅವರನ್ನು ನೇಮಕ ಮಾಡಲಾಗಿದೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ.
ರಾಜ್ಯಸಭಾ ಸದಸ್ಯ, ತ್ರಿಪುರ ಬಿಜೆಪಿ ಅಧ್ಯಕ್ಷ ಮಾಣಿಕ್ ಸಹಾ ಅವರು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.
"ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಡಾ. ಮಾಣಿಕ್ ಸಹಾ ಅವರಿಗೆ ಅಭಿನಂದನೆಗಳು ಮತ್ತು ಶುಭಾಶಯಗಳು ಎಂದು ನಿರ್ಗಮಿತ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಅವರು ಟ್ವೀಟ್ ಮಾಡಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿ ಮತ್ತು ಮಾಣಿಕ ಸಹಾ ನಾಯಕತ್ವದಲ್ಲಿ ತ್ರಿಪುರಾ ಅಭಿವೃದ್ಧಿ ಹೊಂದುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ದೇಬ್ ಹೇಳಿದ್ದಾರೆ.
ತ್ರಿಪುರದಲ್ಲಿ ಮುಂದಿನ ವರ್ಷ ಚುನಾವಣೆ ನಡೆಯಲಿದ್ದು, ಸಂಘಟನೆಯನ್ನು ಬಲಪಡಿಸಲು ನಾನು ಕೆಲಸ ಮಾಡಬೇಕೆಂದು ಪಕ್ಷವು ಬಯಸುತ್ತದೆ ಎಂದು ರಾಜೀನಾಮೆ ನಂತರ ಬಿಪ್ಲಬ್ ಕುಮಾರ್ ದೇಬ್ ಹೇಳಿದ್ದರು.
ತ್ರಿಪುರಾ ಬಿಜೆಪಿಯ ರಾಜ್ಯ ಘಟಕದಲ್ಲಿ ಆಂತರಿಕ ಕಚ್ಚಾಟದ ವರದಿಗಳ ನಂತರ ಈ ಬೆಳವಣಿಗೆ ನಡೆದಿದೆ.