ನವದೆಹಲಿ: ಸೆಂಟ್ರಲ್ ದೆಹಲಿಯ ಸಂಸತ್ ಭವನದ ಬಳಿ ಸೆಂಟ್ರಲ್ ವಿಸ್ತಾ ಯೋಜನೆಯಲ್ಲಿ ತೊಡಗಿಸಿಕೊಂಡಿರುವ ಕಾರ್ಮಿಕರಿಗಾಗಿ ನಿರ್ಮಿಸಲಾಗಿರುವ ಮೂರು ತಾತ್ಕಾಲಿಕ ವಸತಿ ಕೇಂದ್ರಗಳಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಘಟನೆಯಲ್ಲಿ ಯಾವುದೇ ಕಾರ್ಮಿಕರು ಗಾಯಗೊಂಡ ಬಗ್ಗೆ ವರದಿಯಾಗಿಲ್ಲ.
ಹೆಚ್ಚಿನ ಭದ್ರತೆ ಇರುವ ಪ್ರದೇಶದಲ್ಲಿ ಇಂದು ಸಂಜೆ 4-16ರ ಸುಮಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಮಾಹಿತಿ ತಿಳಿದ ಬಳಿಕ ಐದು ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಕಾರ್ಯಚರಣೆ ನಡೆಸಿದ್ದಾಗಿ ಅಗ್ನಿಶಾಮಕ ಇಲಾಖೆ ಸಿಬ್ಬಂದಿ ತಿಳಿಸಿದ್ದಾರೆ.
ಆಕಸ್ಮಿಕ ಬೆಂಕಿಯಿಂದಾಗಿ ವಸತಿ ಕೇಂದ್ರಗಳಲ್ಲಿದ್ದ ದಿನಬಳಕೆಯ ವಸ್ತುಗಳು ಹಾನಿಯಾಗಿದ್ದು, ಸಂಜೆ 4.55 ರ ಸುಮಾರಿನಲ್ಲಿ ಬೆಂಕಿಯನ್ನು ನಿಯಂತ್ರಿಸಲಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.