ತಿರುವನಂತಪುರ: ರಾಜ್ಯದಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದಿಂದ ದಕ್ಷಿಣ ತಮಿಳುನಾಡಿನವರೆಗೆ ವ್ಯಾಪಿಸಿರುವ ಕಡಿಮೆ ಒತ್ತಡದ ಪ್ರದೇಶ ಹಾಗೂ ಅರಬ್ಬಿ ಸಮುದ್ರದಲ್ಲಿ ಪಶ್ಚಿಮ ದಿಕ್ಕಿನ ಗಾಳಿಯ ಪ್ರಭಾವದಿಂದ ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಜೂನ್ 21ರವರೆಗೆ ಕೇರಳದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 21ರವರೆಗೆ ಕೇರಳ, ಕರ್ನಾಟಕ ಮತ್ತು ಲಕ್ಷದ್ವೀಪ ಕರಾವಳಿ ತೀರದಲ್ಲಿ ಮೀನುಗಾರಿಕೆಗೆ ತೆರಳದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ಕೇರಳ-ಕರ್ನಾಟಕ-ಲಕ್ಷದ್ವೀಪ ಕರಾವಳಿಯಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.