ಹಾಪೂರ್: ರಾಸಾಯನಿಕ ಕಾರ್ಖಾನೆಯೊಂದರ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಕನಿಷ್ಠ 8 ಮಂದಿ ಮೃತಪಟ್ಟು, ಇತರ 15 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಹಾಪೂರ್ ಜಿಲ್ಲೆಯಲ್ಲಿ ಇಂದು ಮಧ್ಯಾಹ್ನ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.
ರಾಷ್ಟ್ರ ರಾಜಧಾನಿ ನವದೆಹಲಿಯಿಂದ ಸುಮಾರು 80 ಕಿಲೋ ಮೀಟರ್ ದೂರದಲ್ಲಿರುವ ದೊಲಾನಾದ ಯುಪಿಎಸ್ ಐಡಿಸಿ ಕೈಗಾರಿಕಾ ಪ್ರದೇಶದಲ್ಲಿನ ಕಾರ್ಖಾನೆಯಲ್ಲಿ ಈ ಸ್ಪೋಟ ಸಂಭವಿಸಿದೆ. ಈ ದುರ್ಘಟನೆ ಉಂಟಾದಾಗ 25 ಜನರು ಆ ಪ್ರದೇಶದಲ್ಲಿದ್ದರು ಎಂದು ಅವರು ತಿಳಿಸಿದ್ದಾರೆ.
ಸ್ಫೋಟದ ರಭಸಕ್ಕೆ ಕಾರ್ಖಾನೆ ಸುತ್ತಮುತ್ತಲಿನ ಕೆಲ ಕಾರ್ಖಾನೆಗಳ ಮೇಲ್ಫಾವಣಿಗೆ ಹಾನಿಯಾಗಿದೆ. ಅಗ್ನಿ ಶಾಮಕ ಸಿಬ್ಬಂದಿ ಮೂರು ತಾಸುಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ತಹಬದಿಗೆ ತಂದಿದ್ದಾರೆ. ಈ ಘಟನೆಯಲ್ಲಿ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೀರತ್ ವಲಯದ ಐಜಿಪಿ ಪ್ರವೀಣ್ ಕುಮಾರ್ ಹೇಳಿದ್ದಾರೆ.
ರಕ್ಷಣೆ ಹಾಗೂ ಪರಿಹಾರ ಕಾರ್ಯಾಚರಣೆ ಮುಂದುವರೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ, ಪರಿಹಾರ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ನಿರ್ದೇಶಿಸಿರುವುದಾಗಿ ಮುಖ್ಯಮಂತ್ರಿಗಳ ಕಚೇರಿ ಟ್ವೀಟ್ ಮಾಡಿದೆ.