ಲಾಹೋರ್: ದುಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಾಕಿಸ್ತಾನದ ಮಾಜಿ ಅಧ್ಯಕ್ಷ, ಮಾಜಿ ಸೇನಾ ಸರ್ವಾಧಿಕಾರಿ ಜನರಲ್ ಪರ್ವೇಜ್ ಮುಷರಫ್ ಅವರು ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
78 ವರ್ಷದ ಜನರಲ್ ಪರ್ವೇಜ್ ಮುಷರಫ್ ಅವರು 1999 ರಿಂದ 2008 ರವರೆಗೆ ಪಾಕಿಸ್ತಾನದಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿದ್ದರು.
ಪಾಕಿಸ್ತಾನದ ಮಾಜಿ ಅಧ್ಯಕ್ಷ ಮುಷರಫ್ ಅವರು ವೆಂಟಿಲೇಟರ್‌ನಲ್ಲಿದ್ದಾರೆ ಎಂಬ ವರದಿಗಳನ್ನು ಅವರ ಕುಟುಂಬ ಸ್ಪಷ್ಟವಾಗಿ ತಳ್ಳಿಹಾಕಿದೆ. ಆದರೆ ಅವರು ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಮೂರು ವಾರಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗ ಅವರ ಸ್ಥಿತಿ ಗಂಭೀರವಾಗಿದ್ದು, ಚೇತರಿಸಿಕೊಳ್ಳಲು ಸಾಧ್ಯವಾಗದ ಸ್ಥಿತಿ ತಲುಪಿದ್ದಾರೆ. ಅವರ ಅಂಗಗಳು ಅಸಮರ್ಪಕವಾಗಿ ಕಾರ್ಯನಿರ್ವಹಿಸುವ ಕಠಿಣ ಹಂತವನ್ನು ಎದುರಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಮುಷರಫ್ ಅವರ ಪುತ್ರನೊಂದಿಗೆ ಮಾತನಾಡಿದ್ದು, ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ಇಮ್ರಾನ್ ಖಾನ್ ಸರ್ಕಾರದಲ್ಲಿ ಮಾಹಿತಿ ಸಚಿವರಾಗಿದ್ದ ಮತ್ತು ಮುಷರಫ್ ಅವರ ಮಾಧ್ಯಮ ವಕ್ತಾರರಾಗಿದ್ದ ಚೌಧರಿ ಅವರು ಹೇಳಿದ್ದಾರೆ.