ನವದೆಹಲಿ: ಪ್ರವಾದಿ ಮೊಹಮ್ಮದ್ ಪೈಗಂಬರರ ಕುರಿತು ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ ಹಾಗೂ ನವೀನ್ ಜಿಂದಾಲ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ, ರಾಷ್ಟ್ರ ರಾಜಧಾನಿ ನವದೆಹಲಿ, ಉತ್ತರ ಪ್ರದೇಶ, ಕೊಲ್ಕತ್ತಾ, ಪಂಜಾಬ್, ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಇಂದು ಮುಸ್ಲಿಂರು ಭಾರಿ ಪ್ರತಿಭಟನೆ ನಡೆಸಿದ್ದಾರೆ.
ಕೆಲವೆಡೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಕಲ್ಲು ತೂರಾಟ, ಪೊಲೀಸರೊಂದಿಗೆ
ಘರ್ಷಣೆ, ಅಶ್ರುವಾಯು ಪ್ರಯೋಗದ ಬಗ್ಗೆ ವರದಿಯಾಗಿದೆ.
ಉತ್ತರ ಪ್ರದೇಶದ ಪ್ರಯಾಗ್ ರಾಜ್ ನ ಅಟಲಾ ಪ್ರದೇಶದಲ್ಲಿ ಶುಕ್ರವಾರದ ಪ್ರಾರ್ಥನೆ
ಸಲ್ಲಿಸಿದ ನಂತರ ಮುಸ್ಲಿಂರು ನೂಪುರ್ ಶರ್ಮಾ ಅವರ ಬಂಧನಕ್ಕಾಗಿ ಪ್ರತಿಭಟನೆ
ಆರಂಭಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಘರ್ಷಣೆ
ನಡೆದಿದ್ದು, ಕಲ್ಲು ತೂರಾಟ ನಡೆದಿದೆ. ಎಡಿಜಿಪಿ ಕಾರಿನ ಮೇಲೆ ಕಲ್ಲು ತೂರಾಟ
ನಡೆದಿದ್ದು, ಕಾರಿನ ಗಾಜುಗಳು ಪುಡಿಪುಡಿಯಾಗಿವೆ. ಪ್ರತಿಭಟನೆಯನ್ನು ಹತ್ತಿಕ್ಕುವಂತೆ
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಜಾರ್ಖಂಡ್ ನ ರಾಂಚಿಯಲ್ಲೂ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಎಸ್ ಪಿಗೆ
ಗಾಯವಾಗಿದೆ. ಉದ್ರಿಕ್ತರನ್ನು ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು
ಹಾರಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲೂ ಬೃಹತ್ ಪ್ರತಿಭಟನೆ ನಡೆಸಲಾಗಿದೆ. ಕೋಲ್ಕತ್ತಾದ
ಪಾರ್ಕ್ ಸರ್ಕಸ್ ನಲ್ಲಿ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಮುಸ್ಲಿಂರು, ನೂಪುರ್ ಶರ್ಮಾ
ಹಾಗೂ ನವೀನ್ ಜಿಂದಾಲ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಹೌರಾದಲ್ಲಿಯೂ ಪ್ರತಿಭಟನೆ ನಡೆಯಿತು.
ದೆಹಲಿಯ ಜಾಮಾ ಮಸೀದಿಯ ಮೆಟ್ಟಿಲುಗಳ ಮೇಲೆ ಭಿತ್ತಿಪತ್ರ ಹಿಡಿದು ಕುಳಿತಿದ್ದ
ನೂರಾರು ಪ್ರತಿಭಟನಾಕಾರರು, ಪ್ರವಾದಿ ಮೊಹಮ್ಮದ್ ಪೈಗಂಬರರ ಕುರಿತು
ಅವಹೇಳನಾಕಾರಿ ಹೇಳಿಕೆಯನ್ನು ಖಂಡಿಸಿದರು. ಪಂಜಾಬಿನ ಲೂದಿಯಾನ ಜಾಮಾ
ಮಸೀದಿ ಕರೆ ನಂತರ ಪಂಜಾಬಿನಾದ್ಯಂತ ಪ್ರತಿಭಟನೆ ನಡೆದಿದೆ.
ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಮುಸ್ಲಿಮರು ಬೃಹತ್ ಪ್ರತಿಭಟನಾ ಮೆರವಣಿಗೆ
ನಡೆಸಿದರು.
ಬಿಜೆಪಿಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ ಅವರನ್ನು ಬಂಧಿಸುವಂತೆ
ಆಗ್ರಹಿಸಿ ಕಲಬುರಗಿಯ ಮುಸ್ಲಿಂ ಚೌಕದಲ್ಲಿ ಭಾರೀ ಪ್ರತಿಭಟನೆ ನಡೆಸಲಾಯಿತು.