ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತ್ನಿ ಎಂದು ಸಂಭೋದಿಸಿದ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ವಿರುದ್ಧ ಬಿಜೆಪಿ ಸದಸ್ಯರು ತೀವ್ರ ಪ್ರತಿಭಟನೆ ನಡೆಸಿದ್ದರಿಂದ ಗದ್ದಲ ಸೃಷ್ಠಿಯಾಗಿದ್ದರಿಂದ ಲೋಕಸಭೆ ಕಲಾಪವನ್ನು ಸಂಜೆ 4 ಗಂಟೆಗೆ ಮುಂದೂಡಲಾಗಿದೆ.
ಬೆಳಗ್ಗೆ 11 ಗಂಟೆಗೆ ಸದನ ಸೇರುತ್ತಿದ್ದಂತೆಯೇ ಬಿಜೆಪಿ ಸದಸ್ಯರು ಚೌಧರಿ ಅವರ ಹೇಳಿಕೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕ್ಷಮೆಯಾಚಿಸಬೇಕೆಂದು ಬಿಜೆಪಿ ಸದಸ್ಯರು ಪಟ್ಟು ಹಿಡಿದರು. ಗದ್ದಲದ ನಡುವೆಯೇ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಕಲಾಪವನ್ನು ಮಧ್ಯಾಹ್ನ 12 ಗಂಟೆಗೆ ಮುಂದೂಡಿದರು. ಸದನ ಮತ್ತೆ ಆರಂಭವಾದಾಗಲೂ ಗದ್ದಲ ಮುಂದುವರಿದಿದ್ದರಿಂದ ಕಲಾಪವನ್ನು ಸಂಜೆ 4 ಗಂಟೆಗೆ ಮುಂದೂಡಲಾಯಿತು.
'ಕಾಂಗ್ರೆಸ್ ನಾಯಕ ರಾಷ್ಟ್ರಪತಿಗಳಿಗೆ ಅಗೌರವ ತೋರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಬಡ ಬುಡಕಟ್ಟು ಮಹಿಳೆಯನ್ನು ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಮಾಡಿರುವುದನ್ನು ಕಾಂಗ್ರೆಸ್‌ಗೆ ಸಹಿಸಲಾಗುತ್ತಿಲ್ಲ'ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.
ಅಧೀರ್ ರಂಜನ್ ಚೌಧರಿ ಅವರ ಹೇಳಿಕೆಗೆ ಸೋನಿಯಾ ಗಾಂಧಿ ಕ್ಷಮೆಯಾಚಿಸಬೇಕು ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಒತ್ತಾಯಿಸಿದರು.