ನವದೆಹಲಿ: ಕೇರಳದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಯನ್ನು ತಿರುಚಿ ಸಂಪೂರ್ಣ ತಪ್ಪು ಅರ್ಥ ಮೂಡಿಸುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ನಾಯಕರು ಹಂಚಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪ ಮಾಡಿದ್ದಾರೆ.
ಕೇಂದ್ರ ಸಚಿವ ರಾಜ್ಯವರ್ಧನ್ ರಾಥೋಡ್ ಅವರೂ ಸೇರಿದಂತೆ ಬಿಜೆಪಿ ನಾಯಕರು ಉದ್ದೇಶಪೂರ್ವಕವಾಗಿ ರಾಹುಲ್ ಗಾಂಧಿ ವಿರುದ್ಧದ ತಿರುಚಲಾಗಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿರುವ ಕಾಂಗ್ರೆಸ್, ಇದಕ್ಕೆ ಬಿಜೆಪಿ ಕ್ಷಮೆ ಕೇಳದೇ ಇದ್ದಲ್ಲಿ ಕಾನೂನು ಹೋರಾಟ ನಡೆಸುವುದಾಗಿ ಎಚ್ಚರಿಸಿದೆ.
ಇದೇ ವೇಳೆ ರಾಹುಲ್ ಗಾಂಧಿ ಸಹ ಬಿಜೆಪಿ, ಆರ್ ಎಸ್ ಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಪ್ರಚಾರ ಹಾಗೂ ಸುಳ್ಳುಗಳೇ ಅವರ ಅಡಿಪಾಯ ಎಂದು ಟೀಕಾಪ್ರಹಾರ ನಡೆಸಿದ್ದಾರೆ.
ರಾಥೋಡ್ ಅವರನ್ನು ನಾಚಿಕೆ ಇಲ್ಲದವರು ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದ್ದು, ಮಾಧ್ಯಮಗಳೂ ತಪ್ಪಾಗಿ ರಾಹುಲ್ ಅವರ ಭಾಷಣವನ್ನು ತೋರಿಸಿವೆ ಎಂದು ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ.
ಕೇರಳದಲ್ಲಿ ಮಾತನಾಡುತ್ತಿದ್ದ ರಾಹುಲ್ ಗಾಂಧಿ, ಎಸ್ಎಫ್ಐ ನ ಹಿಂಸಾಚಾರದ ಬಗ್ಗೆ ಮಾತನಾಡಿದ್ದರು, ಆದರೆ ಅದನ್ನು ಅವರು ಉದಯ್ ಪುರದ ಕನ್ಹಯ್ಯಾ ಲಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದಾರೆ ಎಂಬಂತೆ ತಿರುಚಲಾಗಿದೆ ಎಂಬುದು ಕಾಂಗ್ರೆಸ್ ನ ಆರೋಪವಾಗಿದೆ.