ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರ ರಾಜಧಾನಿಯ 12 ಕಡೆಗಳಲ್ಲಿ ಜಾರಿ ನಿರ್ದೇಶನಾಲಯ ಮಂಗಳವಾರ ದಾಳಿ ನಡೆಸಿದೆ. ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷ ಉನ್ನತ ನಾಯಕರು ನಿಯಮ ಉಲ್ಲಂಘಿಸಿದ ಆರೋಪ ಎದುರಿಸುತ್ತಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್ ಎ) ಅಡಿಯಲ್ಲಿ ಹಣಕಾಸು ಅಕ್ರಮಗಳಿಗೆ ಸಂಬಂಧಿಸಿದ ಆರೋಪವಾಗಿದೆ. ಬಿಜೆಪಿಯ ಮುಖಂಡ ಸುಬ್ರಮಣಿಯನ್ ಸ್ವಾಮಿ 2013ರಲ್ಲಿ ದಾಖಲಿಸಿದ್ದ ಖಾಸಗಿ ಕ್ರಿಮಿನಲ್ ದೂರಿನ ಆಧಾರದ ಮೇಲೆ ಆದಾಯ ತೆರಿಗೆ ಇಲಾಖೆ ತನಿಖೆಯನ್ನು ವಿಚಾರಣಾ ನ್ಯಾಯಾಲಯ ಸ್ವಯಂ ಪ್ರೇರಿತವಾಗಿ ಕೈಗೆತ್ತಿಕೊಂಡ 9 ತಿಂಗಳ ನಂತರ ಪ್ರಕರಣ ದಾಖಲಾಗಿತ್ತು.
ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಪ್ರಕಟಿಸುತ್ತಿದ್ದ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ಆಸ್ತಿಯನ್ನು ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ಅವರ ಪುತ್ರ ರಾಹುಲ್ ಗಾಂಧಿ ಅಕ್ರಮವಾಗಿ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್‌ಗೆ (ವೈಐಎಲ್) ವರ್ಗಾಯಿಸಿದ್ದಾರೆ ಮತ್ತು ಇವರಿಬ್ಬರೂ ತಲಾ 38 ರಷ್ಟು ಷೇರುಗಳನ್ನು ಹೊಂದಿದ್ದಾರೆ ಎಂದು ಆರೋಪಿಸಿ ಅರ್ಜಿದಾರರು ನ್ಯಾಯಾಲಯದ ಮೆಟ್ಟಿಲೇರಿದ್ದರು.
ಗಾಂಧಿಯವರು ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಸ್ವಾಮಿ ಆರೋಪಿಸಿದ್ದಾರೆ, ಜುಲೈ 27 ರಂದು ಇಡಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಸುಮಾರು ಮೂರು ಗಂಟೆಗಳ ಕಾಲ ವಿಚಾರಣೆ ನಡೆಸಿದ ದಿನಗಳ ನಂತರ ಈ ದಾಳಿ ನಡೆಸಲಾಗಿದೆ. ಈ ಪ್ರಕರಣದಲ್ಲಿ ಮೂರನೇ ಬಾರಿಗೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರನ್ನು ವಿಚಾರಣೆಗೆ ಒಳಪಡಿಸಲಾಗಿದೆ.