ಮುಂಬೈ: ಶಿವಸೇನಾ ನಾಯಕ ಸಂಜಯ್ ರಾವುತ್ ಅವರನ್ನು ಆಗಸ್ಟ್ 4ರ ವರೆಗೆ ಜಾರಿ ನಿರ್ದೇಶನಾಲಯದ (ಇ.ಡಿ) ಕಸ್ಟಡಿಗೆ ಇಲ್ಲಿನ ವಿಶೇಷ ನ್ಯಾಯಾಲಯ ನೀಡಿತು.
ಪತ್ರಾ ಚಾಲ್ ಭೂ ಹಗರಣಕ್ಕೆ ಸಂಬಂಧಿಸಿದಂತೆ ಮುಂಬೈನ ವಿಶೇಷ ನ್ಯಾಯಾಲಯವು ರಾವುತ್ ಅವರ ವಿಚಾರಣೆಯನ್ನು ಮಾಡಿತು.ಆ ನಂತರ ರಾವುತ್ ಅವರು ಆ.4ರ ವರೆಗೆ ಇ.ಡಿ ಕಸ್ಟಡಿಯಲ್ಲಿ ಇರಬೇಕಾಗುತ್ತದೆ ಎಂದು ಆದೇಶಿಸಿತು.
ಭೂ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಶಿವಸೇನಾ ನಾಯಕ ಸಂಜಯ್ ರಾವುತ್ ನಿವಾಸದಲ್ಲಿ ಭಾನುವಾರ ಬೆಳಿಗ್ಗೆ ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಆ ನಂತರ ಅವರನ್ನು ವಶಕ್ಕೆ ಪಡೆದಿದ್ದಾರೆ.
ಇದೇ ವೇಳೆ, ರಾವುತ್ ಮನೆಗೆ ಭೇಟಿ ನೀಡಿರುವ ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ಅವರು ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದ್ದಾರೆ.
ಮೂಲಗಳ ಪ್ರಕಾರ, ರಾವುತ್ ನಿವಾಸದಿಂದ ₹11.50 ಲಕ್ಷ ಅಕ್ರಮ ನಗದು ಹಣವನ್ನು ಇ.ಡಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ₹1,034 ಕೋಟಿ ಮೊತ್ತದ ಪತ್ರಾ ಚಾಲ್ ಭೂ ಹಗರಣದ ಸುಳಿಯಲ್ಲಿ ರಾವುತ್, ಅವರ ಪತ್ನಿ ಹಾಗೂ ಸ್ನೇಹಿತ ಶಾಮೀಲಾಗಿದ್ದಾರೆ ಎನ್ನಲಾಗಿದೆ.