ನವದೆಹಲಿ: 'ಹರ್ ಘರ್ ತಿರಂಗಾ' ಅಭಿಯಾನದ ಕುರಿತು ವಿದ್ಯಾರ್ಥಿಗಳು, ಸಿಬ್ಬಂದಿ ಮತ್ತು ಇತರ ಪಾಲುದಾರರಲ್ಲಿ ಜಾಗೃತಿ ಮೂಡಿಸಲು ವಿಶ್ವವಿದ್ಯಾಲಯ ಧನಸಹಾಯ ಆಯೋಗವು (ಯುಜಿಸಿ) ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಿದೆ.
ಕೇಂದ್ರ ಸರ್ಕಾರವು 'ಹರ್ ಘರ್ ತಿರಂಗಾ' ಅಭಿಯಾನವನ್ನು ಪ್ರಾರಂಭಿಸಿದೆ. ಇದರ ಅಡಿಯಲ್ಲಿ ಭಾರತಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷಗಳು ಸಂದ ಪ್ರಯುಕ್ತ ಜನರು ತಮ್ಮ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುತ್ತಿದ್ದಾರೆ.
'ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ, ನಾಗರಿಕರು ತಮ್ಮ ಮನೆಗಳಲ್ಲಿ ಭಾರತದ ರಾಷ್ಟ್ರಧ್ವಜವನ್ನು ಹಾರಿಸುವಂತೆ ಉತ್ತೇಜಿಸಲು 'ಹರ್ ಘರ್ ತಿರಂಗ' ಅಭಿಯಾನವನ್ನು ಪ್ರಾರಂಭಿಸಲಾಗಿದೆ. ಜನರಲ್ಲಿ ದೇಶಭಕ್ತಿಯ ಭಾವನೆಯನ್ನು ತುಂಬುವುದು ಈ ಅಭಿಯಾನದ ಉದ್ದೇಶವಾಗಿದ್ದು, ಭಾರತದ ಇತಿಹಾಸ ಮತ್ತು ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಿದವರನ್ನು ನೆನಪಿಸಿಕೊಳ್ಳಿ' ಎಂದು ಯುಜಿಸಿ ಕಾರ್ಯದರ್ಶಿ ರಜನೀಶ್ ಜೈನ್ ವಿಶ್ವವಿದ್ಯಾಲಯದ ಉಪಕುಲಪತಿಗಳು ಮತ್ತು ಕಾಲೇಜು ಪ್ರಾಂಶುಪಾಲರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
ಸಂಸ್ಕೃತಿ ಸಚಿವಾಲಯವು www.hargartiranga.com ಎಂಬ ವೆಬ್‌ಸೈಟ್ ಅಭಿವೃದ್ಧಿಪಡಿಸಿದ್ದು, ಅಲ್ಲಿ ನಾಗರಿಕರು ಧ್ವಜವನ್ನು ಅಪ್‌ಲೋಡ್ ಮಾಡಲು ಮತ್ತು ತ್ರಿವರ್ಣ ಧ್ವಜದೊಂದಿಗಿನ ಭಾವಚಿತ್ರ ಅಪ್‌ಲೋಡ್ ಮಾಡಲು ಪ್ರೋತ್ಸಾಹಿಸಲಾಗುತ್ತದೆ.
'ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳು ವೆಬ್‌ಸೈಟ್ ಕುರಿತು ವಿದ್ಯಾರ್ಥಿಗಳು, ಅಧ್ಯಾಪಕರು, ಸಿಬ್ಬಂದಿ ಮತ್ತು ಇತರ ಪಾಲುದಾರರಲ್ಲಿ ಜಾಗೃತಿ ಮೂಡಿಸಲು ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಈ ಬಗೆಗಿನ ಪ್ರಚಾರಕ್ಕಾಗಿ ಅಧಿಕೃತ ಹ್ಯಾಶ್‌ಟ್ಯಾಗ್ #harghartirang ಅನ್ನು ಬಳಸಲು ವಿನಂತಿಸಲಾಗಿದೆ. ಆಗಸ್ಟ್ 13-15ರ ನಡುವೆ ಅಧಿಕ ಸಂಖ್ಯೆಯ ಜನರು ತಮ್ಮ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಿಸಲು ಪ್ರೇರೇಪಿಸಬಹುದು' ಎಂದು ಜೈನ್ ಹೇಳಿದರು.