ಲಖೀಂಪುರ ಖೇರಿ : ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ಅವರನ್ನು ವಜಾಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಇಲ್ಲಿ ನಡೆಸುತ್ತಿದ್ದ ಪ್ರತಿಭಟನೆಯನ್ನು ಕೈಬಿಟ್ಟಿರುವುದಾಗಿ ಸಂಯುಕ್ತ ಕಿಸಾನ್ ಮೋರ್ಚಾ ನಾಯಕ ರಾಕೇಶ್ ಟಿಕಾಯತ್ ಶನಿವಾರ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಮತ್ತು ಇತರ ಅಧಿಕಾರಿಗಳು ಪ್ರತಿಭಟನಕಾರರನ್ನು ಭೇಟಿಯಾಗಿ ಮನವಿ ಸ್ವೀಕರಿಸಿದ ಕಾರಣ ಪ್ರತಿಭಟನೆಯನ್ನು ನಿಲ್ಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ಟಿಕಾಯತ್, 'ದೆಹಲಿಯಲ್ಲಿ ಸೆಪ್ಟೆಂಬರ್ 6ರಂದು ನಡೆಯಲಿರುವ ಸಭೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾದ ಭವಿಷ್ಯದ ಕಾರ್ಯತಂತ್ರಗಳ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು' ಎಂದು ಹೇಳಿದ್ದಾರೆ.
ಸೆಪ್ಟೆಂಬರ್ ಮೊದಲ ವಾರದಲ್ಲಿ ರೈತರ ಜೊತೆ ಸಭೆ ನಡೆಸಲಾಗುವುದು ಎಂದು ಪ್ರತಿಭಟನಕಾರರಿಗೆ ಜಿಲ್ಲಾಧಿಕಾರಿ ಭರವಸೆ ನೀಡಿದ್ದಾರೆ.