ನವದೆಹಲಿ: ಮುಂದಿನ ಎಐಸಿಸಿ ಅಧ್ಯಕ್ಷರ ಚುನಾವಣೆ ಸಂಬಂಧ ಇಂದು ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ(ಸಿಡಬ್ಲ್ಯೂಸಿ)ಯಲ್ಲಿ ನಿರ್ಧಾರ ಕೈಗೊಳ್ಳಲಾಗಿದ್ದು ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದೆ.
ಕಳೆದ ಶುಕ್ರವಾರ ಪಕ್ಷದ ಹಿರಿಯ ನಾಯಕ ಗುಲಾಂ ನಬಿ ಆಜಾದ್ ರಾಜೀನಾಮೆಯಿಂದ ಪಕ್ಷಕ್ಕೆ ದೊಡ್ಡ ಹೊಡೆತವಾಗಿದ್ದು ಇದರ ನಡುವೆ ನಡೆದ ಸಭೆಯಲ್ಲಿ ಪಕ್ಷದ ಅಧ್ಯಕ್ಷರ ಆಯ್ಕೆಯಾಗಿ ತೀವ್ರ ಕಸರತ್ತು ನಡೆದಿದೆ. ಪಕ್ಷದ ಅಧ್ಯಕ್ಷರ ಆಯ್ಕೆಗೆ ಸೆಪ್ಟೆಂಬರ್ 22ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ಸೆಪ್ಟೆಂಬರ್ 24ರಂದು ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಸೆಪ್ಟೆಂಬರ್ 30ರವರೆಗೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಕಪಿಲ್ ಸಿಬಲ್ ಮತ್ತು ಅಶ್ವನಿ ಕುಮಾರ್ ಸೇರಿದಂತೆ ಹಿರಿಯ ನಾಯಕರ ರಾಜಿನಾಮೆಯಿಂದ ತತ್ತರಿಸಿರುವ ಕಾಂಗ್ರೆಸ್, ಇದೀಗ ಆಜಾದ್‌ರ ಡಿಎನ್‌ಎಯನ್ನು "ಮೋದಿ ಫೈಡ್" ಎಂದು ಆರೋಪಿಸುವ ಮೂಲಕ ಇತ್ತೀಚಿನ ಆಘಾತವನ್ನು ತಿರುಗಿಸಲು ಪ್ರಯತ್ನಿಸಿದೆ.
ಪಕ್ಷದ ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ವರ್ಚುವಲ್ ಆಗಿ ಭಾಗವಹಿಸಿದ್ದರು. ಜಿ-23 ಭಿನ್ನಮತೀಯ ಗುಂಪಿನ ಭಾಗವಾಗಿದ್ದ ಆನಂದ್ ಶರ್ಮಾ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಪಕ್ಷದ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ, ಕೆ ಸಿ ವೇಣುಗೋಪಾಲ್, ಮಾಜಿ ಕೇಂದ್ರ ಸಚಿವರಾದ ಜೈರಾಮ್ ರಮೇಶ್, ಮುಕುಲ್ ವಾಸ್ನಿಕ್ ಮತ್ತು ಪಿ ಚಿದಂಬರಂ ಮತ್ತು ರಾಜಸ್ಥಾನ ಮುಖ್ಯಮಂತ್ರಿಗಳು ಉಪಸ್ಥಿತರಿದ್ದರು.