ಲಖನೌ: ಉತ್ತರ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ಭಾರತೀಯ ಸೇನಾ ಆವರಣದ ಗೋಡೆ ಕುಸಿದು ಒಂಬತ್ತು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಅವಶೇಷಗಳ ಅಡಿಯಿಂದ ಓರ್ವ ವ್ಯಕ್ತಿಯನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಿಲ್‌ಕುಶಾ ಪ್ರದೇಶದಲ್ಲಿನ ಸೇನಾ ಆವರಣದ ಹೊರಗಡೆ ಕೆಲವು ಕಾರ್ಮಿಕರು ಗುಡಿಸಲುಗಳಲ್ಲಿ ವಾಸಿಸುತ್ತಿದ್ದರು. ಗುರುವಾರ ರಾತ್ರಿಯಿಡೀ ಸುರಿದ ಭಾರಿ ಮಳೆಯಿಂದಾಗಿ ಸೇನಾ ಆವರಣದ ಗೋಡೆ ಕುಸಿದಿದೆ ಎಂದು ಜಂಟಿ ಪೊಲೀಸ್ ಕಮಿಷನರ್ (ಕಾನೂನು ಮತ್ತು ಸುವ್ಯವಸ್ಥೆ) ಪಿಯೂಷ್ ಮೊರ್ದಿಯಾ ತಿಳಿಸಿದ್ದಾರೆ.
ಬೆಳಗಿನ ಜಾವ 3 ಗಂಟೆಗೆ ನಾವು ಘಟನಾ ಸ್ಥಳಕ್ಕೆ ತಲುಪಿದೆವು. ಅವಶೇಷಗಳ ಅಡಿಯಿಂದ ಒಂಬತ್ತು ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಘಟನೆಗೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ ₹4 ಲಕ್ಷ ಮತ್ತು ಗಾಯಗೊಂಡವರ ಚಿಕಿತ್ಸೆಗೆ ₹2 ಲಕ್ಷ ಪರಿಹಾರ ಘೋಷಿಸಿದ್ದಾರೆ.