HEALTH TIPS

ನೀಲಿಮಿಶ್ರಿತ ಶ್ವೇತ ಶಿಲೆಯ ರಾಮನ ವಿಗ್ರಹ ಪ್ರತಿಷ್ಠಾಪನೆ: ಅಯೋಧ್ಯೆ ಟ್ರಸ್ಟ್ ನಿರ್ಣಯ

 

               ಅಯೋಧ್ಯೆ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರದಲ್ಲಿ  ನೀಲಿ ಮಿಶ್ರಿತ ಶ್ವೇತ ಶಿಲೆಯಲ್ಲಿ ಶಿಲ್ಪಶಾಸ್ತ್ರೋಕ್ತ ರೀತಿಯಲ್ಲಿ ಶ್ರೀರಾಮನ ವಿಗ್ರಹ ನಿರ್ಮಿಸಿ ಪ್ರತಿಷ್ಠಾಪಿಸಲಾಗುವುದೆಂದು ಭಾನುವಾರ ಅಯೋಧ್ಯೆಯ ಪ್ರವಾಸಿ ಮಂದಿರದಲ್ಲಿ ನಡೆದ ಟ್ರಸ್ಟ್ ಸಭೆಯಲ್ಲಿ ನಿರ್ಣಯಿಸಲಾಗಿದೆ . 

                ಟ್ರಸ್ಟ್ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲ್ ದಾಸ್ ಜೀ ಅಧ್ಯಕ್ಷತೆಯಲ್ಲಿ ಹಾಗೂ ಕಾರ್ಯದರ್ಶಿಗಳಾದ ಚಂಪತ್ ರಾಯ್ , ಕೋಶಾಧಿಕಾರಿ ಗೋವಿಂದ ಗಿರಿ ಸ್ವಾಮೀಜಿ , ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಮೊದಲಾದವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

                   ಆರಂಭದಲ್ಲಿ ಮಂದಿರ ನಿರ್ಮಾಣಕ್ಕೆ  ಸುಮಾರು 400 ಕೋಟಿ ವೆಚ್ಚ  ತಗುಲಬಹುದೆಂದು ಅಂದಾಜಿಸಲಾಗಿತ್ತು . ಆದರೆ ಜಿಎಸ್ ಟಿ ವೆಚ್ಚ , ರಾಯಲ್ಟಿ ಮೊದಲಾದ ಅನೇಕ ಕಾರಣಗಳಿಂದ ನಿರ್ಮಾಣ ವೆಚ್ಚ 1300 ಕೋಟಿ ತಗುಲಬಹುದೆಂದು ಅಂದಾಜಿಸಲಾಗಿದೆ . ಆದರೆ ಮಂದಿರಕ್ಕಾಗಿ ದೇಶಾದ್ಯಂತ ಭಕ್ತರು ನೀಡುತ್ತಿರುವ ದೇಣಿಗೆಯೂ ಭರಪೂರ ಹರಿದು ಬರುತ್ತಿದೆ .‌ ಪ್ರತಿ ತಿಂಗಳು ಸುಮಾರು 50 ಲಕ್ಷಕ್ಕಿಂತಲೂ ಅಧಿಕ ದೇಣಿಗೆ ಬರುತ್ತಿದ್ದು ಕೆಲವೊಮ್ಮೆ ಈ ಮೊತ್ತ ಕೋಟಿಗೂ ಮೀರಿದೆ . ಆದ್ದರಿಂದ ಈ ತನಕದ ಸುಮಾರು 300 ಕೋಟಿ ಖರ್ಚನ್ನು ಈಗ ಹರಿದು ಬರುತ್ತಿರುವ ಹೆಚ್ಚುವರಿ ದೇಣಿಗೆಯಿಂದಲೇ ನಿರ್ವಹಿಸಲಾಗಿದೆ ಎಂದೂ ಸಭೆಗೆ ತಿಳಿಸಲಾಯಿತು .

                ಆರಂಭದ ದೇಣಿಗೆ ಸಂಗ್ರಹ ಅಭಿಯಾನದಿಂದ ಬಂದ‌ ಸಾವಿರ ಕೋಟಿಗೂ ಮೀರಿದ  ಮೂಲಧನದ ಸಮ್ಯಕ್ ನಿರ್ವಹಣೆಯ ಮಾಡಬೇಕಾದ ಕುರಿತಾಗಿಯೂ ಸಭೆ ಗಂಭೀರ ಚರ್ಚೆ ನಡೆಸಿತು . ಮಂದಿರಕ್ಕೆ ಬೇಕಾಗುವ ಸಾಗುವಾನಿ ಮರವನ್ನು ಮಹಾರಾಷ್ಟ್ರ ದಿಂದ ತರಿಸಿಕೊಳ್ಳಲಾಗುವುದು .ಈ  ಖರ್ಚು ವೆಚ್ಚಗಳ ವಿವರಗಳನ್ನು ಸಭೆಗೆ ಸಲ್ಲಿಸಿ ಅನುಮೋದನೆ ಪಡೆಯಲಾಯಿತು .

                ಭವ್ಯರಾಮಮಂದಿರದ ಪ್ರಧಾನ ಗರ್ಭಗುಡಿಯ ಶಿಖರಕ್ಕೆ ರಾಮಭಕ್ತ ಹನುಮನ ಪವಿತ್ರ ನೆಲವಾಗಿರುವ ಕರ್ನಾಟಕದಿಂದ ಸ್ವರ್ಣ ಶಿಖರವನ್ನು ಅರ್ಪಿಸಬೇಕೆನ್ನುವ ನಾಡಿನ ಅಸಂಖ್ಯ ಭಕ್ತರ  ಇಂಗಿತವನ್ನು  ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಸಭೆಯಲ್ಲಿ ಮಂಡಿಸಿದರು. ಮಂದಿರದ ವಾಸ್ತು ವಿನ್ಯಾಸಕ್ಕೆ ಅನುಗುಣವಾಗಿ ಸ್ವರ್ಣ ಶಿಖರವನ್ನು ರಾಜ್ಯದ ಭಕ್ತರ ಸಹಕಾರದಿಂದ ನಿರ್ಮಿಸಿ ವಿಶ್ವ ಹಿಂದು ಪರಿಷತ್ ನೇತೃತ್ವದಲ್ಲಿ ಕರ್ನಾಟಕದ ಹಂಪೆಯಿಂದ ಸ್ವರ್ಣ ಶಿಖರ ಯಾತ್ರೆಯನ್ನು ರಾಜ್ಯಾದ್ಯಂತ ಸಂಚರಿಸಿ ಅಯೋಧ್ಯೆಗೆ ತಲುಪಿಸುವ ಇರಾದೆಯನ್ನು ಭಕ್ತರು ಹೊಂದಿರುವುದನ್ನು ಶ್ರೀಗಳು ತಿಳಿಸಿದರು

             ಮುಂದಿನ ವರ್ಷಾಂತ್ಯಕ್ಕೆ ನಡೆಯುವ ನೂತನ ಮಂದಿರ ಸಮರ್ಪಣೆ ಹಾಗೂ ಶ್ರೀರಾಮನ ಪ್ರತಿಷ್ಠಾ ಮಹೋತ್ಸವಕ್ಕೆ ದಿನಾಂಕ ನಿಗದಿ ಪಡಿಸಿದ ಬಳಿಕ  ದೇಶದ ಭಕ್ತರನ್ನು ಈ ಉತ್ಸವಕ್ಕೆ  ಆಹ್ವಾನಿಸುವ ಸಲುವಾಗಿಯೂ ಒಂದು ಯಾತ್ರೆಯನ್ನು ಕೈಗೊಳ್ಳಬಹುದೆಂಬ ಅಭಿಪ್ರಾಯವನ್ನೂ  ಶ್ರೀಗಳು ವ್ಯಕ್ತಪಡಿಸಿದರು.



 

 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries