ಕೊಚ್ಚಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಹಾಗೂ ನಾಯಕ ರಾಹುಲ್ ಗಾಂಧಿ ಅವರ ಸಮ್ಮತಿ ಅಗತ್ಯವಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂವಹನ ಉಸ್ತುವಾರಿ) ಜೈರಾಮ್ ರಮೇಶ್ ಸ್ಪಷ್ಟಪಡಿಸಿದ್ದಾರೆ.
ಯಾರೇ ಆದರೂ 10 ಪಿಸಿಸಿ ಪ್ರತಿನಿಧಿಗಳ ಬೆಂಬಲದೊಂದಿಗೆ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಸ್ವತಂತ್ರರು. ನಾಮಪತ್ರ ಸಲ್ಲಿಸಲು ಕಾಂಗ್ರೆಸ್ ವರಿಷ್ಠೆ ಅಥವಾ ರಾಹುಲ್ ಗಾಂಧಿ ಅವರ ಅನುಮತಿ ಪಡೆಯಬೇಕಿಲ್ಲ ಎಂದು ಹೇಳಿದ್ದಾರೆ.
ದೇಶದ ಬೇರೆ ಯಾವುದೇ ರಾಜಕೀಯ ಪಕ್ಷಗಳು ಪಕ್ಷದ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಸುತ್ತಿಲ್ಲ ಎಂದು ಜೈರಾಮ್ ರಮೇಶ್ ಉಲ್ಲೇಖಿಸಿದರು. ಕಾಮರಾಜ್ ಮಾದರಿಯಲ್ಲಿ ಒಮ್ಮತದ ಆಧಾರದಲ್ಲಿ ಪಕ್ಷದ ಅಧ್ಯಕ್ಷರ ಆಯ್ಕೆ ನಡೆಯುವ ವಿಶ್ವಾಸವಿದೆ ಎಂದು ಅವರು ಹೇಳಿದರು.ಒಂದು ವೇಳೆ ಒಮ್ಮತದ ನಿರ್ಧಾರ ಸಾಧ್ಯವಾಗದಿದ್ದರೆ ಚುನಾವಣೆ ಮೂಲಕ ಅಧ್ಯಕ್ಷರ ಆಯ್ಕೆ ನಡೆಯಲಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಯಾರೆಲ್ಲ ಸ್ಪರ್ಧಿಸುತ್ತಿದ್ದಾರೆ ಎಂಬುದು ನನಗೆ ತಿಳಿದಿಲ್ಲ. ಆದರೆ ನಾನು ಸ್ಪರ್ಧಿಸುವುದಿಲ್ಲ ಎಂದು ಜೈರಾಮ್ ರಮೇಶ್ ಸ್ಪಷ್ಟಪಡಿಸಿದ್ದಾರೆ.