ನವದೆಹಲಿ: ಐಎಎಸ್ ಅಧಿಕಾರಿಗಳನ್ನು ರಾಜ್ಯಗಳ ಅನುಮತಿಯಿಲ್ಲದೆ ನಿಯೋಜನೆ ಮೇಲೆ ಕೇಂದ್ರಕ್ಕೆ ಕರೆಸಿಕೊಳ್ಳುವ ಸಂಬಂಧ ನಾಗರಿಕ ಸೇವಾ ನಿಯಮಾವಳಿಯಲ್ಲಿ ಬದಲಾವಣೆ ತರಲು ಕೇಂದ್ರ ಸರ್ಕಾರ ಸಿದ್ಧಪಡಿಸಿದ್ದ ಪ್ರಸ್ತಾವಕ್ಕೆ ಹಲವು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಪ್ರತಿಕ್ರಿಯೆ ದಾಖಲಿಸಿದ್ದು, ಅವುಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಈ ಕುರಿತು ಇಲ್ಲಿಯವರೆಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಪ್ರಸ್ತುತ ಜಾರಿಯಲ್ಲಿ ಇರುವ ನಿಯಮಗಳ ಪ್ರಕಾರ ಐಎಎಸ್ ಅಧಿಕಾರಿಗಳನ್ನು ಕೇಂದ್ರಕ್ಕೆ ನಿಯೋಜನೆ ಮೇರೆಗೆ ಕಳುಹಿಸಲು ಕೇಂದ್ರ- ರಾಜ್ಯ ಸರ್ಕಾರಗಳ ಪರಸ್ಪರ ಅನುಮತಿ ಅಗತ್ಯ.
ಈ ಸೇವಾ ನಿಯಮಗಳಲ್ಲಿ ಬದಲಾವಣೆ ತರುವ ಪ್ರಸ್ತಾವಕ್ಕೆ ರಾಜ್ಯ ಸರ್ಕಾರಗಳಿಂದ ಬಂದಿರುವ ಪ್ರತಿಕ್ರಿಯೆಗಳ ಪ್ರತಿಗಳನ್ನು ಆರ್‌ಟಿಐ ಅರ್ಜಿಗೆ ಒದಗಿಸಲು ಕೇಂದ್ರ ಸರ್ಕಾರ ನಿರಾಕರಿಸಿದೆ. ಈ ಸಂಬಂಧ ಸುದ್ದಿ ಸಂಸ್ಥೆ ಆರ್‌ಟಿಐ ಅಡಿ ಅರ್ಜಿ ಸಲ್ಲಿಸಿತ್ತು.
ಭಾರತೀಯ ಆಡಳಿತ ಸೇವಾ ನಿಯಮಗಳಲ್ಲಿ (1954) ಬದಲಾವಣೆ ತರಲು ಕೇಂದ್ರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಕಳೆದ ವರ್ಷ ಪ್ರಸ್ತಾವನೆ ಸಲ್ಲಿಸಿತ್ತು. ಈ ಕುರಿತು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರತಿಕ್ರಿಯೆ ದಾಖಲಿಸುವಂತೆ ಕೇಂದ್ರ ಸೂಚಿಸಿತ್ತು.
'ಈ ಪ್ರಸ್ತಾವನೆಗೆ ವಿವಿಧ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಇತರ ಭಾಗೀದಾರರು ಪ್ರತಿಕ್ರಿಯೆ ಸಲ್ಲಿಸಿದ್ದಾರೆ. ಈ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ' ಎಂದು ಇಲಾಖೆ ಆರ್‌ಟಿಐ ಅರ್ಜಿಗೆ ಪ್ರತಿಕ್ರಿಯಿಸಿದೆ.