ನವದೆಹಲಿ: ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ರಾಜ್ಯ ಸರ್ಕಾರದ ಹಿಜಾಬ್ ನಿಷೇಧವನ್ನು ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧದ ಅರ್ಜಿಗಳ ವಿಚಾರಣೆಯನ್ನು ಗುರುವಾರ ಪೂರ್ಣಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ಕಾಯ್ದಿರಿಸಿದೆ.
ಮಾರ್ಚ್ 15 ರಂದು, ಉಡುಪಿಯ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರ ತಂಡ, ತರಗತಿಯೊಳಗೆ ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಅಲ್ಲದೆ ಇದು ಇಸ್ಲಾಮಿಕ್ ನಂಬಿಕೆಯ ಅಗತ್ಯ ಧಾರ್ಮಿಕ ಆಚರಣೆಯ ಭಾಗವಲ್ಲ ಎಂದು ಹೈಕೋರ್ಟ್ ಹೇಳಿತ್ತು.
ರಾಜ್ಯ ಸರ್ಕಾರವು ಫೆಬ್ರವರಿ 5, 2022 ರಂದು ಹೊರಡಿಸಿದ ತನ್ನ ಆದೇಶದಲ್ಲಿ ಶಾಲೆ ಮತ್ತು ಕಾಲೇಜುಗಳಲ್ಲಿ ಸಮಾನತೆ, ಸಮಗ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುವ ಬಟ್ಟೆ ಧರಿಸುವುದನ್ನು ನಿಷೇಧಿಸಿದೆ.
ರಾಜ್ಯ ಸರ್ಕಾರದ ನಿಷೇಧ ಎತ್ತಿ ಹಿಡಿದ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು.
ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ಈ ಪ್ರಕರಣದ ತೀರ್ಪನ್ನು ಕಾಯ್ದಿರಿಸಿದೆ.