ನವದೆಹಲಿ: ಅವಧಿಗೆ ಮುನ್ನವೇ ಬಿಡುಗಡೆಗೊಳಿಸುವಂತೆ ಕೋರಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕಿ ನಳಿನಿ ಶ್ರೀಹರನ್ ಸಲ್ಲಿಸಿರುವ ಅರ್ಜಿ ಸಂಬಂಧಿಸಿ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರ ಮತ್ತು ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ನೋಟಿಸ್ ನೀಡಿದೆ.
ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಬಿ.ವಿ. ನಾಗರತ್ನ ಅವರಿದ್ದ ಪೀಠವು ಈ ನೋಟಿಸ್ ನೀಡಿದೆ.
ಹತ್ಯೆ ಮೊಕದ್ದಮೆಗೆ ಸಂಬಂಧಿಸಿದಂತೆ ನಳಿನಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾರೆ. ಅವಧಿಗೆ ಮುನ್ನವೇ ಬಿಡುಗಡೆ ಮಾಡುವಂತೆ ಕೋರಿ ಅವರು ಈ ಹಿಂದೆ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಜೂನ್ 17ರಂದು ತೀರ್ಪು ನೀಡಿದ್ದ ಹೈಕೋರ್ಟ್ ಅರ್ಜಿಯನ್ನು ತಿರಸ್ಕರಿಸಿತ್ತು. ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ನಳಿನಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಇದೇ ವೇಳೆ, ಮೊಕದ್ದಮೆಯ ಮತ್ತೊಬ್ಬ ದೋಷಿ ಆರ್.ಪಿ. ರವಿಚಂದ್ರನ್ ಸಲ್ಲಿಸಿರುವ ಅರ್ಜಿ ಕುರಿತೂ ಪ್ರತಿಕ್ರಿಯೆ ನೀಡುವಂತೆ ಕೂಡಾ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.