ಲಖನೌ: ಉತ್ತರ ಪ್ರದೇಶದ 17 ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಸುಮಾರು 900 ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. 11 ಮಂದಿ ಮಳೆಗೆ ಸಂಬಂಧಿಸಿದ ಅವಘಡದಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ.
ಪ್ರವಾಹದಿಂದ ಸುಮಾರು 8.43 ಲಕ್ಷ ಮಂದಿ ಸಂಕಷ್ಟಕ್ಕೆ ಒಳಗಾಗಿದ್ದಾರೆ.
ರೈಲು, ಬಸ್ ಸಂಚಾರಕ್ಕೆ ತೊಡಕಾಗಿದೆ ಎಂದು ವಿಪತ್ತು ನಿರ್ವಹಣಾ ಇಲಾಖೆ ಮಾಹಿತಿ ನೀಡಿದೆ.
ಝಾನ್ಸಿಯಲ್ಲಿ ಸೋಮವಾರ ಮಧ್ಯಾಹ್ನದ ನಂತರ ಸಿಡಿಲು ಬಡಿದು ಏಳು ಮಂದಿ ಮೃತಪಟ್ಟಿದ್ದಾರೆ. ಇನ್ನೂ ಕೆಲವರು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಲ್‌ರಾಮ್‌ಪುರದಲ್ಲಿ ಇಬ್ಬರು ಪ್ರವಾಹದಲ್ಲಿ ಕೊಚ್ಚಿ ಹೋಗಿ ಮೃತಪಟ್ಟಿದ್ದಾರೆ. ಕಾಣೆಯಾಗಿರುವ ಇನ್ನಿಬ್ಬರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.